ನವದೆಹಲಿ: 'ಪ್ರಧಾನಿ ನರೇಂದ್ರ ಮೋದಿ ಅವರನ್ನು ಪದೇ ಪದೇ ಅಣಕಿಸುತ್ತಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ತಕ್ಕ ರೀತಿಯಲ್ಲಿ ಪ್ರತ್ಯುತ್ತರ ನೀಡಲು ಕೇಂದ್ರ ಸರ್ಕಾರ ವಿಫಲವಾಗಿದೆ' ಎಂದು ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, 'ಟ್ರಂಪ್ ಅವರು ನಮ್ಮ ದೇಶ ಮತ್ತು ಪ್ರಧಾನಿ ಅವರನ್ನು ಅಪಹಾಸ್ಯ ಮಾಡುವುದನ್ನು ಮುಂದುವರಿಸಿದ್ದಾರೆ. ಈ ಸರ್ಕಾರದ ವಿದೇಶಾಂಗ ನೀತಿ ಸಂಪೂರ್ಣ ವಿಫಲವಾಗಿದೆ' ಎಂದು ಟೀಕಿಸಿದ್ದಾರೆ.
'ಪ್ರಧಾನಿ, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವರು ಇಂದು ಬಿಜೆಪಿಯ ಪ್ರಚಾರ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೋದಿ ಅವರಿಗೆ ದೇಶದ ಜನರ ಮೇಲೆ ಕಾಳಜಿ ಇರುತ್ತಿದ್ದರೆ ಅವರು ಪಹಲ್ಗಾಮ್‌ಗೆ ಭೇಟಿ ನೀಡುತ್ತಿದ್ದರು. ಆದರೆ ಅವರು ಬಿಹಾರಕ್ಕೆ ಭೇಟಿ ನೀಡಲು ಆಸಕ್ತಿ ತೋರಿದರು' ಎಂದು ದೂರಿದರು.
ಶಿವಾಸೇನಾ (ಯುಬಿಟಿ) ಪಕ್ಷವು ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಜತೆಗೇ ಇರಲಿದೆ ಎಂದು ಅವರು ಸ್ಪಷ್ಟಪಡಿಸಿದರು.




