ನವದೆಹಲಿ: ಸಿಎಸ್‌ಡಿಎಸ್ ಸಂಸ್ಥೆಯ ಸಹ ನಿರ್ದೇಶಕ, ಚುನಾವಣಾ ವಿಶ್ಲೇಷಕ ಸಂಜಯ್ ಕುಮಾರ್ ಅವರ ವಿರುದ್ಧ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿ ಯಾವುದೇ ಕ್ರಮ ಕೈಗೊಳ್ಳಬಾರದು, ಅವರನ್ನು ಬಂಧಿಸಬಾರದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ಆದೇಶ ನೀಡಿದೆ.
ಸುಳ್ಳು ಮಾಹಿತಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗವು ಇವರ ಮೇಲೆ ಎರಡು ದೂರು ನೀಡಿತ್ತು. ತಮ್ಮ ಮೇಲೆ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದು ಮಾಡುವಂತೆ ಕೋರಿ ಸಂಜಯ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ಪೀಠವು ಅರ್ಜಿಯ ವಿಚಾರಣೆ ನಡೆಸಿತು.
ಲೋಕಸಭೆ ಚುನಾವಣೆ ಮತ್ತು ವಿಧಾನಸಭೆ ಚುನಾವಣೆ ಹೋಲಿಕೆಯಲ್ಲಿ ಮಹಾರಾಷ್ಟ್ರದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಸಂಖ್ಯೆ ಅಧಿಕಗೊಂಡಿದೆ ಎಂದು ಅಂಕಿ ಅಂಶ ಸಮೇತ ಸಂಜಯ್ ಅವರು 'ಎಕ್ಸ್'ನಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ಬಳಿಕ, ಅಂಕಿ ಅಂಶಗಳಲ್ಲಿ ಕೆಲವು ದೋಷಗಳು ಇವೆ ಎಂದು ಸಾರ್ವಜನಿಕವಾಗಿ ಕ್ಷಮೆ ಕೇಳಿ ಪೋಸ್ಟ್ ಅನ್ನು ಅಳಿಸಿ ಹಾಕಿದ್ದರು.

