ಕೋಲ್ಕತ್ತ: ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಲೋಕಸಭೆಯಲ್ಲಿ ಸದನದ ನಾಯಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರು ಡೈಮಂಡ್ ಹಾರ್ಬರ್ ಕ್ಷೇತ್ರದಿಂದ ಸ್ಪರ್ಧಿಸಿ ಮೂರನೇ ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ.
ಅಭಿಷೇಕ್ ಬ್ಯಾನರ್ಜಿ ಅವರು ಸುದೀಪ್ ಬಂಡೋಪಾಧ್ಯಾಯ ಅವರ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ. ಅನಾರೋಗ್ಯ ಕಾರಣ ಬಂಡೋಪಾಧ್ಯಾಯ ಅವರನ್ನು ಸದನದ ನಾಯಕ ಸ್ಥಾನದಿಂದ ಮುಕ್ತಗೊಳಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಟಿಎಂಸಿ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅಧ್ಯಕ್ಷತೆಯಲ್ಲಿ ನಡೆದ ವರ್ಚುವಲ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಲೋಕಸಭೆ ಸಂಸದರು ಮತ್ತು ರಾಜ್ಯಸಭೆ ಸದಸ್ಯರು ಸಭೆಯಲ್ಲಿ ಹಾಜರಿದ್ದರು ಎಂದು ತಿಳಿದುಬಂದಿದೆ.
ಲೋಕಸಭೆಯಲ್ಲಿ 29 ಸ್ಥಾನಗಳನ್ನು ಹೊಂದಿರುವ ಟಿಎಂಸಿ, ವಿರೋಧ ಪಕ್ಷಗಳ 'ಇಂಡಿಯಾ' ಮೈತ್ರಿಕೂಟದಲ್ಲಿ ಪ್ರಮುಖ ಪಾತ್ರವಹಿಸಿದೆ.

