ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮಾಡಿರುವ 'ಮತಗಳ್ಳತನ' ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಚುನಾವಣಾ ಆಯುಕ್ತರೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿರುವ ಅವರು, ಆರೋಪಗಳಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು 7 ದಿನಗಳಲ್ಲಿ ಪ್ರಮಾಣಪತ್ರ ಸಲ್ಲಿಸಬೇಕು.
ಇಲ್ಲವಾದರೆ, ಆರೋಪಗಳನ್ನು ಆಧಾರರಹಿತವಾದವು ಎಂದು ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ. ಹಾಗೆಯೇ, 'ಪ್ರಮಾಣಪತ್ರ ಸಲ್ಲಿಸಿ. ಇಲ್ಲವೇ, ಕ್ಷಮೆಯಾಚಿಸಿ' ಎಂದೂ ತಾಕೀತು ಮಾಡಿದ್ದಾರೆ.
'ಸೂಕ್ತ ಸಾಕ್ಷ್ಯಗಳಿಲ್ಲದೆ ಯಾವುದೇ ಮತದಾರನ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದಿಲ್ಲ. ಚುನಾವಣಾ ಆಯೋಗವು ಪ್ರತಿಯೊಬ್ಬ ಮತದಾರನೊಂದಿಗೆ ಬಂಡೆಯಂತೆ ನಿಂತಿದೆ' ಎಂದು ಹೇಳಿದ್ದಾರೆ.
ಬಿಹಾರದಲ್ಲಿ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಮಾಡುತ್ತಿರುವ ಆರೋಪಗಳಿಗೆ ತಿರುಗೇಟು ನೀಡಿರುವ ಸಿಇಸಿ, 'ತರಾತುರಿಯಲ್ಲಿ ಎಸ್‌ಐಆರ್ ನಡೆಸಲಾಗುತ್ತಿದೆ ಎಂಬುದು ಸುಳ್ಳು. ಪ್ರತಿ ಚುನಾವಣೆಗೂ ಮುನ್ನ ಮತದಾರರ ಪಟ್ಟಿಯನ್ನು ಸರಿಪಡಿಸುವುದು ಚುನಾವಣಾ ಆಯೋಗದ ಕಾನೂನುಬದ್ಧ ಕರ್ತವ್ಯವಾಗಿದೆ' ಎಂದು ಪ್ರತಿಪಾದಿಸಿದ್ದಾರೆ.
ರಾಹುಲ್ ಗಾಂಧಿ ಅವರು ದೆಹಲಿಯಲ್ಲಿ ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ಚುನಾವಣಾ ಆಯೋಗ ಮತ್ತು ಬಿಜೆಪಿ ವಿರುದ್ಧ ಮತಗಳ್ಳತನದ ಆರೋಪ ಮಾಡಿದ್ದರು.
'ಮಹಾರಾಷ್ಟ್ರ, ಕರ್ನಾಟಕ ಮತ್ತು ಹರಿಯಾಣದಲ್ಲಿ ಭಾರಿ 'ಮತಗಳ್ಳತನ' ನಡೆಸಿ ಬಿಜೆಪಿ ಜಯ ಗಳಿಸಿದೆ. ಮತದಾರರ ಪಟ್ಟಿಯಲ್ಲಿ ಅಕ್ರಮ ಎಸಗಲು ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ' ಎಂದು ಆರೋಪಿಸಿದ್ದರು. ಹಾಗೆಯೇ, ಬಿಹಾರದಲ್ಲಿ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಎಸ್‌ಐಆರ್ ನಡೆಸಲಾಗುತ್ತಿದೆ. 65 ಲಕ್ಷ ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂದೂ ದೂರಿದ್ದರು.
ಇದೇ ವಿಚಾರವಾಗಿ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ಮೈತ್ರಿಕೂಟ 'ಇಂಡಿಯಾ' ಬಣ, ಬಿಹಾರದಲ್ಲಿ ಇಂದಿನಿಂದ (ಆಗಸ್ಟ್ 17ರಿಂದ) 'ಮತದಾರನ ಅಧಿಕಾರ ಯಾತ್ರೆ' ನಡೆಸುತ್ತಿದೆ.




