ಮುಂಬೈ: ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಮೂವರು ಮೃತಪಟ್ಟಿದ್ದು, 120ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸೇರಿದಂತೆ ರಕ್ಷಣಾ ತಂಡಗಳು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಮಾಹಿತಿ ನೀಡಿದೆ.
ಬೀಡ್ ಜಿಲ್ಲೆಯಲ್ಲಿ ಮಳೆ ಸಂಬಂಧಿತ ಅವಘಡಗಳಲ್ಲಿ ಇಬ್ಬರು ಹಾಗೂ ನಾಗ್ಪುರದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದ ಐದು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಬೀಡ್ ಜಿಲ್ಲೆಯಲ್ಲಿ 14.37 ಸೆಂ.ಮೀ ಅತಿ ಹೆಚ್ಚು ಮಳೆಯಾಗಿದ್ದು, ನಾಂದೇಡ್‌ನಲ್ಲಿ 13.16 ಸೆಂ.ಮೀ ಮತ್ತು ಜಲ್ನಾದಲ್ಲಿ 12.14 ಸೆಂ.ಮೀ ಮಳೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳು ನೀರಿನಿಂದ ತುಂಬಿ ಹರಿಯುತ್ತಿದೆ. ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ಬೀಡ್ ಮತ್ತು ಅಹಲ್ಯಾನಗರ ಹೆಚ್ಚು ಹಾನಿಗೊಳಗಾದ ಪ್ರದೇಶಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನದಿ ತೀರ ಗ್ರಾಮಗಳಲ್ಲಿ ಹಾಗೂ ತಗ್ಗು ಪ್ರದೇಶಗಳ ಮೇಲೆ ನಿಗಾ ಇಟ್ಟಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ಭರದಿಂದ ಸಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.




