ಜುನಾಗಡ: 'ಅಧಿಕಾರದಲ್ಲಿರುವವರು ದೇಶದ ಸಾಂವಿಧಾನಿಕ ಸಂಸ್ಥೆಗಳ ರಕ್ಷಣೆ ಮಾಡುತ್ತಿಲ್ಲ. ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವುದು ನಮ್ಮ ಪಕ್ಷದ ಪ್ರಮುಖ ಜವಾಬ್ದಾರಿಯಾಗಿದೆ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಪಾದಿಸಿದ್ದಾರೆ.
ಗುಜರಾತ್ ಕಾಂಗ್ರೆಸ್‌ನ ಜಿಲ್ಲಾ ಹಾಗೂ ನಗರ ಅಧ್ಯಕ್ಷರಿಗೆ 10 ದಿನಗಳ ತರಬೇತಿ ಶಿಬಿರವನ್ನು ಉದ್ಘಾಟನೆಯ ಮೊದಲು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
'ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳಲ್ಲಿ ಸ್ಪರ್ಧಿಸುವುದು ಸಾಮಾನ್ಯವಾಗಿದೆ. ಆದರೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ರಕ್ಷಣೆಯೇ ನಮ್ಮ ಮೊದಲ ಆದ್ಯತೆಯಾಗಿದೆ' ಎಂದು ಹೇಳಿದ್ದಾರೆ.
'ಗುಜರಾತ್‌ನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಂತಹ ಮಹಾನ್ ವ್ಯಕ್ತಿಗಳು ಹುಟ್ಟಿದ್ದಾರೆ. ಅವರೆಲ್ಲರೂ ದೇಶದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ್ದಾರೆ. ಅವರೆಲ್ಲರ ಹೋರಾಟದಿಂದಾಗಿ ದೇಶಕ್ಕೆ ಸ್ವಾತಂತ್ರ್ಯ ದೊರಕಿದ್ದು, ಒಗ್ಗಟ್ಟಾಗಿದೆ' ಎಂದು ಉಲ್ಲೇಖಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಖರ್ಗೆ, 'ಅಧಿಕಾರದಲ್ಲಿರುವವರು ಸಂವಿಧಾನದ ರಕ್ಷಣೆ ಹಾಗೂ ಪ್ರಜಾಪ್ರಭುತ್ವವನ್ನು ಉಳಿಸಲು ಬಯಸುತ್ತಿಲ್ಲ' ಎಂದು ಟೀಕಿಸಿದ್ದಾರೆ.




