ನವದೆಹಲಿ: ಅಕ್ರಮ ಬೆಟ್ಟಿಂಗ್ ಆಯಪ್ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಶಿಖರ್ ಧವನ್ ಗುರುವಾರ ಜಾರಿ ನಿರ್ದೇಶನಾಲಯದ ಎದುರು ವಿಚಾರಣೆಗೆ ಹಾಜರಾದರು.
ನವದೆಹಲಿಯಲ್ಲಿರುವ ಇ.ಡಿ ಕಚೇರಿಗೆ ಬೆಳಿಗ್ಗೆ 11 ಗಂಟೆಗೆ ಭೇಟಿ ನೀಡಿದ ಅವರಿಂದ ಅಧಿಕಾರಿಗಳು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಹೇಳಿಕೆಗಳನ್ನು ದಾಖಲಿಸಿಕೊಂಡರು.
'1ಎಕ್ಸ್‌ಬೆಟ್' ಹೆಸರಿನ ಅಕ್ರಮ ಬೆಟ್ಟಿಂಗ್ ಆಯಪ್ ಮತ್ತು ಈ ಆಯಪ್ ಮೂಲಕ ನಡೆದಿರುವ ಹಣ ಅಕ್ರಮ ವರ್ಗಾವಣೆ ಕುರಿತು ಇ.ಡಿ ತನಿಖೆ ನಡೆಯುತ್ತಿದೆ. ಇದರಲ್ಲಿ ಶಿಖರ್ ಧವನ್ ಪಾತ್ರದ ಕುರಿತು ಇ.ಡಿ ವಿಚಾರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ವಾರ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟ್ ಆಟಗಾರ ಸುರೇಶ್ ರೈನಾ ಅವರನ್ನು ಇ.ಡಿ. ವಿಚಾರಣೆಗೆ ಒಳಪಡಿಸಿತ್ತು.




