ಕಾಸರಗೋಡು: ಗಡಿನಾಡ ಕನ್ನಡಿಗರು ಎದುರಿಸುತ್ತಿರುವ ಕೆಲವೊಂದು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಕನ್ನಡಿಗರ ನಿಯೋಗವೊಂದು ಮಂಗಳವಾರ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ತಿರುವನಂತಪುರದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು.
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರ ನೇತೃತ್ವದಲ್ಲಿ ಭೇಟಿ ನಡೆಯಿತು. ಕಾಸರಗೋಡು ಶಾಸಕ ಎನ್.ಎ ನೆಲ್ಲಿಕುನ್ನು, ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್, ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಪ್ರಾಧಿಕಾರ ಸದಸ್ಯ ಎ.ಆರ್ ಸುಬ್ಬಯ್ಯಕಟ್ಟೆ, ಕನ್ನಡಪರ ಸಂಘಟನೆ ಸದಸ್ಯರು ಉಪಸ್ಥಿತರಿದ್ದರು.
ಗಡಿನಾಡ ಕನ್ನಡಿಗರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಗಮನಹರಿಸಿ ಶೀಘ್ರ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸಿಎಂ ಅವರಿಗೆ ಮನವಿ ಸಲ್ಲಿಸಲಾಯಿತು. ಇದೇ ಸಂದರ್ಭ ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ಕನ್ನಡ ಸಾಂಸ್ಕøತಿಕ ಭವನದ ಉದ್ಘಾಟನೆಗೆ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಅಧಿಕೃತ ಆಹ್ವಾನ ನೀಡಲಾಯಿತು. ಇದೇ ಸಂದರ್ಭ ಕೇರಳ ವಿಧಾನಸಭೆ ಸ್ಪೀಕರ್ ಎ.ಎನ್ ಶಂಸೀರ್, ಪ್ರತಿಪಕ್ಷ ಮುಖಂಡ ವಿ.ಡಿ ಸತೀಶನ್ ಅವರನ್ನೂ ನಿಯೋಗ ಭೇಟಿ ಮಾಡಿತುಭೇಟಿ ಮಾಡಿತು.
ಕಾಸರಗೋಡು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ನಾಮಫಲಕ ಅಳವಡಿಸಬೇಕು, ಕೇರಳದ ಸರ್ಕಾರಿ ಸೇವೆಗಳಲ್ಲಿ ಭಾಷಾ ಅಲ್ಪಸಂಖ್ಯಾತರಿಗೆ ಕಾನೂನಾತ್ಮಕ ರೀತಿಯಲ್ಲಿ ನೇಮಕಾತಿ ನೀಡಬೇಕು, ಪಡಿತರ ಚೀಟಿ, ಮತದಾರರ ಪಟ್ಟಿಯಲ್ಲಿ ಕನ್ನಡವನ್ನೂ ಅಳವಡಿಸಬೇಕು, ಬದಿಯಡ್ಕ ಪೆರಡಾಲದ ಡಾ. ಕಯ್ಯಾರ ಕಿಞಣ್ಣ ರೈ ಕನ್ನಡ ಭವನಕ್ಕೆ ಸರ್ವಋತು ಸಂಪರ್ಕ ರಸ್ತೆ ಕಲ್ಪಿಸಬೇಕು, ಸಾಂಸ್ಕತಿಕ ಸಂಸ್ಥೆಗಳಿಗೆ ಅನುದಾನ ಒದಗಿಸಬೇಕು, ಕಾಸರಗೋಡು ಜಿಲ್ಲೆಯ ಕನ್ನಡ ಮಾಧ್ಯಮ ಶಾಲೆಗಳಿಗೆ ಕಡ್ಡಾಯವಾಗಿ ಕನ್ನಡಬಲ್ಲ ಶಿಕ್ಷಕರನ್ನೇ ನೇಮಿಸಬೇಕು, ಡಾ. ಪ್ರಭಾಕರನ್ ಸಮಿತಿ ವರದಿ ಅನುಷ್ಠಾನಗೊಳಿಸಬೇಕು, ಕಾಸರಗೋಡಿನ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಮುಂತಾದ ಬೇಡಿಕೆಯುಳ್ಳ ಮನವಿ ಸಲ್ಲಿಸಲಾಯಿತು.



