ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಪ್ರತಿಕ್ರಿಯೆ ನೀಡಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನಾಲ್ಕು ವಾರಗಳ ಗಡುವು ನೀಡಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಶೀಘ್ರದಲ್ಲಿ ರಾಜ್ಯದ ಸ್ಥಾನಮಾನ ನೀಡಲು ಸೂಚಿಸುವಂತೆ ಕೋರಿ ಶಿಕ್ಷಣ ತಜ್ಞ ಝಹೂರ್ ಅಹಮದ್ ಭಟ್ ಮತ್ತು ಸಾಮಾಜಿಕ ಕಾರ್ಯಕರ್ತ ಅಹಮದ್ ಮಲ್ಲಿಕ್ ಸಲ್ಲಿಸಿದ್ದ ಅರ್ಜಿಗಳು ಸೇರಿದಂತೆ ಈ ಕುರಿತಾದ ಹಲವು ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರ ಪೀಠವು ವಿಚಾರಣೆ ನಡೆಸುತ್ತಿದೆ.
'ಇದೊಂದು ವಿಭಿನ್ನ ಸಮಸ್ಯೆ ಹಾಗಾಗಿ ಸಮಗ್ರ ಅವಲೋಕನದ ಅತ್ಯಗತ್ಯವಾಗಿದೆ. ಈ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ' ಎಂದು ಸರ್ಕಾರದ ಪರ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯಕ್ಕೆ ತಿಳಿಸಿದರು.
ಸಂವಿಧಾನದ 37ನೇ ವಿಧಿಯಡಿ ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ 2023ರ ಡಿಸೆಂಬರ್ 11ರಂದು ಎತ್ತಿಹಿಡಿದಿತ್ತು. ಆದರೆ, ಈ ಕೇಂದ್ರಾಡಳಿತ ಪ್ರದೇಶಗಳಲ್ಲಿ 2024ರ ಸೆಪ್ಟೆಂಬರ್ ಒಳಗಾಗಿ ವಿಧಾನಸಭಾ ಚುನಾವಣೆ ನಡೆಸಬೇಕು ಮತ್ತು ಶೀಘ್ರದಲ್ಲಿ ರಾಜ್ಯದ ಸ್ಥಾನಮಾನ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

