ಪೋರ್ಟ್ ಬ್ಲೇರ್: ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ಚಂಡಮಾರುತ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದತ್ತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.
ಅಕ್ಟೋಬರ್ 21ರಂದು ಚಂಡಮಾರುತ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಅಕ್ಟೋಬರ್ 23ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸ್ಥಳೀಯ ಬಂದರುಗಳಿಗೆ ಮುನ್ನೆಚ್ಚೆರಿಕೆ ನೀಡಲಾಗಿದೆ.
ಅಕ್ಟೋಬರ್ 21ರಿಂದ 23ರವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು (7ರಿಂದ 11 ಸೆಂ.ಮೀ.), ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿರುಗಾಳಿ ಸಹಿತ ಮಳೆ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಸ್ಥಳೀಯರು ಹಾಗೂ ಪ್ರವಾಸಿಗರಲ್ಲೂ ಮಾರ್ಗಸೂಚಿ ಪಾಲಿಸುವಂತೆ ವಿನಂತಿ ಮಾಡಲಾಗಿದೆ.
ಕರ್ನಾಟಕದ ಕರಾವಳಿ ಪ್ರದೇಶಗಳಲ್ಲೂ ಅಕ್ಟೋಬರ್ 24ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.




