ವಿದ್ಯಾರ್ಥಿಗಳ ದಂಗೆಯನ್ನು ಹತ್ತಿಕ್ಕಲು ಮಾರಣಾಂತಿಕ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಶೇಖ್ ಹಸೀನಾ, ಮಾಜಿ ಗೃಹ ಸಚಿವ ಅಸಾದುಜ್ಜಾಮಾನ್ ಖಾನ್ ಕಮಲ್ ಹಾಗೂ ಮಾಜಿ ಐಜಿಪಿ ಚೌಧರಿ ಅಬ್ದುಲ್ಲಾ ಅಲ್-ಮುಮುನ್ ಅವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ನ್ಯಾಯಮಂಡಳಿಯು 54 ಸಾಕ್ಷ್ಯಗಳನ್ನು ಪರಿಶೀಲಿಸಿ, ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದು, ಇಂದು (ಸೋಮವಾರ) ತೀರ್ಪು ಪ್ರಕಟಿಸಿದೆ.
ಹಸೀನಾ ಅವರ ಸರ್ಕಾರ ಪ್ರತಿಭಟನಕಾರರ ಮೇಲೆ ಭದ್ರತಾ ಕ್ರಮ ಕೈಗೊಳ್ಳಲು ಆದೇಶಿಸಿದ್ದರಿಂದ 2024ರ ಜುಲೈ 15ರಿಂದ ಆಗಸ್ಟ್ 15ರವರೆಗೆ 1,400 ಜನರು ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಚೇರಿಯ ವರದಿ ಹೇಳಿದೆ.
ಢಾಕಾದಲ್ಲಿ ಹೈ ಅಲರ್ಟ್:
ತೀರ್ಪಿಗೂ ಮುನ್ನ ಬಾಂಗ್ಲಾದೇಶದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿತ್ತು, ಯಾವುದೇ ಅಹಿತಕರ ಘಟನೆ, ಸಂಘರ್ಷಗಳು ನಡೆಯದಂತೆ ಎಚ್ಚರ ವಹಿಸಲು ಸೇನಾ ಪಡೆಗಳು, ಬಾಂಗ್ಲಾದೇಶ ಗಡಿ ಭದ್ರತಾ ಪಡೆ ಹಾಗೂ ಅರೆ ಸೇನಾ ಪಡೆಯ ತುಕಡಿಗಳನ್ನು ರಾಜಧಾನಿ ಢಾಕಾದಲ್ಲಿ ನಿಯೋಜಿಸಲಾಗಿದೆ. ಅಲ್ಲದೇ ಹಿಂಸಾತ್ಮಕ ಪ್ರತಿಭಟನೆ ನಡೆಸುವವರ ವಿರುದ್ಧ ಕಂಡಲ್ಲಿ ಗುಂಡು ಹಾರಿಸುವ ಆದೇಶ ಹೊರಡಿಸಲಾಗಿದೆ.




