ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಎಲ್ಲಾ ವರ್ಚುವಲ್ ಖಾಸಗಿ ನೆಟ್‌ವರ್ಕ್ ಸೇವೆಗಳನ್ನು (ವಿಪಿಎನ್) 2 ತಿಂಗಳು ಸ್ಥಗಿತಗೊಳಿಸುವಂತೆ ಅಲ್ಲಿನ ಜಿಲ್ಲಾಧಿಕಾರಿ ಭಾನುವಾರ ಆದೇಶ ಹೊರಡಿಸಿದ್ದಾರೆ.
ತಕ್ಷಣವೇ ಜಾರಿಗೆ ಬರುವಂತೆ ಎಲ್ಲಾ ವಿಪಿಎನ್ ಸೇವೆಗಳನ್ನು ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ಅಶೋಕ್ ಕುಮಾರ್ ಶರ್ಮಾ ಆದೇಶಿಸಿದ್ದಾರೆ.
ಕಾನೂನು ಬಾಹಿರ ಚಟುವಟಿಕೆಗಳಿಗೆ ವಿಪಿಎನ್‌ಗಳ ದುರುಪಯೋಗವಾಗುವ ಸಾಧ್ಯತೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.
'ಕಳೆದ ಕೆಲವು ದಿನಗಳಿಂದ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಅನುಮಾನಾಸ್ಪದವಾದ ಇಂಟರ್‌ನೆಟ್ ಬಳಕೆದಾರರಿಂದ ಹೆಚ್ಚು ವಿಪಿಎನ್ ಬಳಕೆಯಾಗಿರುವುದು ಪತ್ತೆಯಾಗಿದೆ' ಎಂದು ಆದೇಶದಲ್ಲಿ ತಿಳಿಸಲಾಗಿದೆ.




