ನವದೆಹಲಿ: ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಇಂದು (ಸೋಮವಾರ) ದಟ್ಟವಾದ ಮಂಜು ಆವರಿಸಿದ್ದು, ಕಡಿಮೆ ಗೋಚರತೆಯಿಂದಾಗಿ ಅನೇಕ ವಿಮಾನಗಳ ಕಾರ್ಯಾಚರಣೆಗೆ ತೊಡಕಾಗಿದೆ. ಒಟ್ಟು 60ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ವರದಿಯಾಗಿದೆ.
ದೆಹಲಿಗೆ ಬರುವ ಮತ್ತು ಅಲ್ಲಿಂದ ಹೊರಡುವ 40 ವಿಮಾನಗಳನ್ನು ರದ್ದುಗೊಳಿಸುವುದಾಗಿ ಏರ್ ಇಂಡಿಯಾ ಘೋಷಿಸಿದೆ.
ಏತನ್ಮಧ್ಯೆ, ಕೆಲವು ವಿಮಾನಗಳು ವಿಳಂಬವಾಗಬಹುದು ಎಂದು ಇಂಡಿಗೊ ಹೇಳಿದೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ಈವರೆಗೆ 61 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಜತೆಗೆ 5 ವಿಮಾನಗಳ ಮಾರ್ಗ ಬದಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜತೆಗೆ 250ಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿವೆ ಎಂದೂ ಅವರು ಹೇಳಿದ್ದಾರೆ.
ದಟ್ಟವಾದ ಮಂಜಿನಿಂದಾಗಿ ಗೋಚರತೆ ಪ್ರಮಾಣ ಕಡಿಮೆ ಇದೆ. ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಕೆಲವು ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಸದ್ಯ ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಪರಿಸ್ಥಿತಿ ಸುಧಾರಿಸಿದ ಬಳಿಕ ವಿಮಾನಗಳ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗುವುದು ಎಂದು ಏರ್ ಇಂಡಿಯಾ ಹೇಳಿದೆ.
ದಟ್ಟವಾದ ಮಂಜಿನಿಂದಾಗಿ ವಿಮಾನಗಳ ಕಾರ್ಯಾಚರಣೆಗೆ ತೊಡಕಾಗಿದೆ ಎಂದು ದೆಹಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಕಡಿಮೆ ಗೋಚರತೆ ಇರುವುದರಿಂದ ಕೆಲವು ವಿಮಾನಗಳು ವಿಳಂಬವಾಗಬಹುದು ಎಂದು ಇಂಡಿಗೊ ಪ್ರಕಟಣೆಯಲ್ಲಿ ಹೇಳಿದೆ.
ದಟ್ಟ ಮಂಜಿನಿಂದಾಗಿ ರಸ್ತೆ ಸಂಚಾರವೂ ನಿಧಾನವಾಗಬಹುದು. ವಿಮಾನ ನಿಲ್ದಾಣಕ್ಕೆ ಪ್ರಯಾಣ ಯೋಜಿಸುವಾಗ ಹೆಚ್ಚುವರಿ ಪ್ರಯಾಣ ಸಮಯ ಮೀಸಲಿಡುವಂತೆ ನಾಗರಿಕ ವಿಮಾನಯಾನ ಸಚಿವಾಲಯವು ಪ್ರಯಾಣಿಕರಿಗೆ ಸಲಹೆ ನೀಡಿದೆ.

