ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 294 ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಗುರುವಾರ ಘೋಷಿಸಿದೆ. ಪಶ್ಚಿಮ ಬಂಗಾಳ ಕಾಂಗ್ರೆಸ್ ಸಮಿತಿಯ ಹಿರಿಯ ನಾಯಕರೊಂದಿಗೆ ಪಕ್ಷದ ವರಿಷ್ಠರು ಇಂದು ನಡೆಸಿದ ಪ್ರಮುಖ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನವದೆಹಲಿಯ ರಾಜಾಜಿ ಮಾರ್ಗದಲ್ಲಿರುವ 10, ನಿವಾಸದಲ್ಲಿ ನಡೆದ ಸಭೆಯಲ್ಲಿ ಖರ್ಗೆ, ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ಗುಲಾಂ ಅಹ್ಮದ್ ಮಿರ್, ಪಕ್ಷದ ರಾಜ್ಯಾಧ್ಯಕ್ಷ ಸುಬಾಂಕರ್ ಸರ್ಕಾರ್, ಹಿರಿಯ ನಾಯಕರಾದ ಅಧೀರ್ ರಂಜನ್ ಚೌಧರಿ, ಸಂಸದ ಇಶಾ ಖಾನ್ ಚೌಧರಿ ಮತ್ತಿತರರು ಉಪಸ್ಥಿತರಿದ್ದರು.
ಕೆಲ ನಾಯಕರು ವರ್ಚುಯಲ್ ಮೂಲಕ ಸಭೆಗೆ ಹಾಜರಾದರು. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್-ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆಯಿದ್ದು, ಪ್ರಮಖ ಕಾರ್ಯತಂತ್ರಗಳ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಮಿರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಪ್ರತಿಯೊಬ್ಬರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಪಶ್ಚಿಮ ಬಂಗಾಳದ ಎಲ್ಲಾ 294 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಲಾಯಿತು. ಇದನ್ನು ಗಮನದಲ್ಲಿಟ್ಟುಕೊಂಡು ನಾವು ಸಿದ್ಧತೆ ಆರಂಭಿಸುತ್ತೇವೆ ಎಂದರು.
ಈ ಹಿಂದೆ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿದ್ದರಿಂದ ತಳಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಉತ್ಸಾಹವನ್ನು ಕುಗ್ಗಿಸಿತ್ತು ಎಂದು ಮೀರ್ ಹೇಳಿದರು.
2021 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ, ಕಾಂಗ್ರೆಸ್ ಎಡರಂಗದೊಂದಿಗೆ ಮೈತ್ರಿ ಮಾಡಿಕೊಂಡಿತ್ತು ಮತ್ತು ಒಂದು ಸ್ಥಾನವನ್ನು ಗೆದ್ದಿರಲಿಲ್ಲ.

