ಮುಂಬೈ: ಉದ್ಯೋಗ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇ 5ರಷ್ಟು ಮೀಸಲಾತಿಯನ್ನು ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿದೆ.
ಈ ಬಗ್ಗೆ ಸರ್ಕಾರ ಮಂಗಳವಾರ ಅಧಿಸೂಚನೆ ಹೊರಡಿಸಿದೆ.
ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇ 5ರಷ್ಟು ಮೀಸಲಾತಿ ಅಧಿಸೂಚನೆಗೆ ಸಂಬಂಧಿಸಿದಂತೆ ನ್ಯಾಯಾಲಯ ಮಧ್ಯಂತರ ತಡೆ ನೀಡಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಹಿಂದಿನ 'ಮಹಾ ವಿಕಾಸ್ ಆಘಾಡಿ' ಸರ್ಕಾರ ಮರಾಠ ಸಮುದಾಯಕ್ಕೆ ಶೇ 16 ಮತ್ತು ಮುಸ್ಲಿಂ ಸಮುದಾಯಕ್ಕೆ ಶೇ 5ರಷ್ಟು ಮೀಸಲಾತಿ ನೀಡಿತ್ತು.
ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಉದ್ಯೋಗ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ನೀಡಲಾಗಿದ್ದ ಶೇ 5ರಷ್ಟು ಮೀಸಲಾತಿಗೆ ಸಂಬಂಧಿಸಿದಂತೆ 2014ರಿಂದ ಹೊರಡಿಸಲಾದ ಎಲ್ಲಾ ಅಧಿಸೂಚನೆ ಹಾಗೂ ಆದೇಶಗಳನ್ನು ರದ್ದುಪಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

