ಕಾಸರಗೋಡು: ಪುಸ್ತಕದ ಜ್ಞಾನದ ಬೆಳಕನ್ನು ಪಸರಿಸುವ ಮೂಲಕವೇ ಉದ್ಘಾಟನೆಗೊಂಡ ಕಾರ್ಯಕ್ರಮವು ಔಚಿತ್ಯಪೂರ್ಣವಾಗಿದೆ. ಶುದ್ಧವಾದ ಕನ್ನಡ ಭಾಷೆ ಕಾಸರಗೋಡಿನಲ್ಲಿ ಶ್ರೀಮಂತವಾಗಿದೆ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ ಅಭಿಪ್ರಾಯಪಟ್ಟರು.
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ (ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಜಿಲ್ಲಾ ಸಮಿತಿ ಇವರ ಆಶ್ರಯದಲ್ಲಿ ನಿನ್ನೆ ಕಾಸರಗೋಡಲ್ಲಿ ಆಯೋಜಿಸಲಾಗಿದ್ದ ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಸರಗೋಡು ಕ್ಯಾಪಿಟಲ್ ಇನ್ ಸಭಾಂಗಣದಲ್ಲಿ ಶನಿವಾರ ಜರಗಿದ ಕಾರ್ಯಕ್ರಮದಲ್ಲಿ ಗಡಿನಾಡ ಚೇತನ ಪ್ರಶಸ್ತಿ ಪುರಸ್ಕøತ ಎನ್. ಚನಿಯಪ್ಪ ನಾಯ್ಕ ಅವರಿಗೆ ಸಾರ್ವಜನಿಕ ಅಭಿನಂದನೆ ಜರಗಿತು. ಕಾಸರಗೋಡು ಶಾಸಕ ಎನ್.ಎ. ನೆಲ್ಲಿಕುನ್ನು ಸನ್ಮಾನಿಸಿ ಮಾತನಾಡುತ್ತಾ ಕಾಸರಗೋಡಿನ ಕನ್ನಡಿಗರು ಬೇರೆಅಲ್ಲ, ಮಲಯಾಳಿಗಳು ಬೇರೆ ಅಲ್ಲ. ಒಂದೇ ತಾಯಿಯ ಮಕ್ಕಳಂತೆ ಎರಡೂ ಭಾಷೆಗಳನ್ನು ನಾವು ಪ್ರೀತಿಸುತ್ತೇವೆ ಎಂದರು.
ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಅಭಿನಂದನಾ ನುಡಿಗಳನ್ನಾಡಿದರು. ಗೌರವಾರ್ಪಣೆಯನ್ನು ಸ್ವೀಕರಿಸಿ ಪತ್ರಕರ್ತ ಪಿ.ಬಿ. ಹರೀಶ್ ರೈ ಮಂಗಳೂರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಕಾಸರಗೋಡು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಸಂಸ್ಥಾಪಕ ಎಸ್. ಪ್ರದೀಪ್ ಕುಮಾರ್ ಕಲ್ಕೂರ, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಕೇರಳ ಪ್ರಾಂತ್ಯ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷ ಸುಕೇಶ್ ಎ., ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಅಖಿಲೇಶ್ ನಗುಮುಗಂ, ಗಮಕ ಕಲಾಪರಿಷತ್ತು ಕಾಸರಗೋಡು ಇದರ ಅಧ್ಯಕ್ಷ ತೆಕ್ಕೇಕರೆ ಶಂಕರನಾರಾಯಣ ಭಟ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು. ಕೆ.ಗಂಗಾಧರ ತೆಕ್ಕೆಮೂಲೆ, ಎ.ಆರ್. ಸುಬ್ಬಯ್ಯಕಟ್ಟೆ ಉಪಸ್ಥಿತರಿದ್ದರು. ಪತ್ರಕರ್ತ ಪುರುಷೋತ್ತಮ ಪೆರ್ಲ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕೆ.ಎಸ್. ವಂದಿಸಿದರು. ವಿ.ಜಿ.ಕಾಸರಗೋಡು ನಿರೂಪಣೆಗೈದರು. 32ಕ್ಕೂ ಹೆಚ್ಚು ಕನ್ನಡ ಶಾಲೆಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು. ಶಾಲೆಗಳ ಅಧ್ಯಾಪಕರು, ಪತ್ರಕರ್ತರು ಪಾಲ್ಗೊಂಡಿದ್ದರು.



