ಮಾಸ್ಕೊ: ರಷ್ಯಾದ ಬಾಷ್ಕೋರ್ಟೊಸ್ತಾನ್ ಪ್ರಾಂತ್ಯದಲ್ಲಿರುವ ವೈದ್ಯಕೀಯ ವಿಶ್ವವಿದ್ಯಾನಿಲಯದಲ್ಲಿ ಭಾರತ ಮೂಲದ ನಾಲ್ವರು ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ದಾಳಿ ಮಾಡಲಾಗಿದೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.
ವೈದ್ಯಕೀಯ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನಿಲಯದಲ್ಲಿ ಘಟನೆ ಜರಗಿದೆ.
ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ವಿದ್ಯಾರ್ಥಿಯೊಬ್ಬ ಚಾಕುವಿನಿಂದ ದಾಳಿ ಮಾಡಿದ್ದಾನೆ. ಘಟನೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ನಾಲ್ವರು ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.
ಆರೋಪಿಯು 15 ವರ್ಷದ ಬಾಲಕನಾಗಿದ್ದು, ಘಟನೆಯಲ್ಲಿ ಅವನು ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ. ಅವನು ನಿಷೇಧಿತ ಸಂಘಟನೆಯೊಂದರ ಪರವಾಗಿ ಕೆಲಸ ಮಾಡುತ್ತಿದ್ದ ಎಂದು ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಯ ಮಾನಸಿಕ ಸಮಸ್ಯೆ ತಿಳಿದಿದ್ದರು ಕೂಡ ವಸತಿ ನಿಲಯದ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಅವರ ನಿರ್ಲಕ್ಷ್ಯದಿಂದ ಕೃತ್ಯ ಸಂಭವಿಸಿದೆ. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

