ಈ ಅರ್ಜಿ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಒಟ್ಟು 243 ಸ್ಥಾನಗಳಲ್ಲಿ 202 ಸ್ಥಾನಗಳನ್ನು ಗೆದ್ದು ಅಧಿಕಾರವನ್ನು ಉಳಿಸಿಕೊಂಡಿದೆ. ಇಂಡಿಯಾ ಮೈತ್ರಿಕೂಟವು ಕೇವಲ 35 ಸ್ಥಾನಗಳಿಗೆ ಸೀಮಿತವಾಗಿದ್ದು, ಕಾಂಗ್ರೆಸ್‌ಗೆ ಆರು ಸ್ಥಾನಗಳು ಲಭಿಸಿವೆ. ಜನ ಸುರಾಜ್ ಪಕ್ಷವು ಖಾತೆ ತೆರೆಯಲು ವಿಫಲವಾಗಿದ್ದು, ಅದರ ಬಹುತೇಕ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ.
ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಬಳಿಕ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯಡಿ ಮಹಿಳೆಯರಿಗೆ ತಲಾ 10,000 ರೂ. ನೇರ ಹಣ ವರ್ಗಾವಣೆ ಮಾಡುವ ಮೂಲಕ ಬಿಹಾರ ಸರ್ಕಾರವು ಮಾದರಿ ಸಂಹಿತೆ ಉಲ್ಲಂಘಿಸಿದೆ ಎಂದು ಪಕ್ಷವು ಅರ್ಜಿಯಲ್ಲಿ ಆರೋಪಿಸಿದೆ.
ಮಹಿಳಾ ಮತದಾರರಿಗೆ ನೇರ ಹಣ ವರ್ಗಾವಣೆಯ ವಿರುದ್ಧ ಸಂವಿಧಾನದ ವಿಧಿ 324 ಹಾಗೂ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 123ರ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿದೆ.
ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ಸಣ್ಣ ಉದ್ಯಮ ಆರಂಭಿಸಲು, ಸ್ವಯಂ ಉದ್ಯೋಗ ಹಾಗೂ ಮಹಿಳಾ ಸಬಲೀಕರಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ತಲಾ 10,000 ರೂ. ಆರಂಭಿಕ ಆರ್ಥಿಕ ನೆರವು ನೀಡಲಾಗುತ್ತಿದೆ.

