ಕೋಲ್ಕತ್ತಾ: ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೆದ್ದಿದೆ.
ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತಾ ಬ್ಯಾನರ್ಜಿ ಮತ್ತು ಬಂಗಾಳದ ಆಡಳಿತ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಮಂಗಳವಾರ 294 ವಿಧಾನಸಭಾ ಕ್ಷೇತ್ರಗಳ ಪೈಕಿ 291 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, 74 ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.
"ಟಿಕೆಟ್ ಸಿಗದವರು ತಪ್ಪಾಗಿ ಅರ್ಥಮಾಡಿಕೊಳ್ಳಬಾರದು. ಚುನಾವಣೆಯ ನಂತರ ಅವರಿಗೆ ಪಕ್ಷದಲ್ಲಿ ಇತರ ಜವಾಬ್ದಾರಿಗಳನ್ನು ನೀಡಲಾಗುವುದು" ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಅಭ್ಯರ್ಥಿಗಳ ಪಟ್ಟಿ ಘೋಷಣೆಯ ನಂತರ ಹೇಳಿದರು. ಆದಾಗ್ಯೂ, ಈ ಶಾಸಕರಲ್ಲಿ ಹಲವಾರು ಜನಕ್ಕೆ ಪಕ್ಷ ತಮಗೆ ದ್ರೋಹ ಮಾಡಿದ ಭಾವನೆ ಇದೆ.
ಜಲ್ಪೈಗುರಿಯ ರಾಜ್‌ಗಂಜ್‌ನಿಂದ ನಾಲ್ಕು ಬಾರಿ ತೃಣಮೂಲ ಕಾಂಗ್ರೆಸ್ ಶಾಸಕರಾಗಿರುವ ಖಗೇಶ್ವರ್ ರಾಯ್ ಅವರು ಟಿಕೆಟ್ ನಿರಾಕರಿಸಿದ ನಂತರ ಪಕ್ಷದ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

