"ಇರಾನ್ ಮತ್ತು ಗಲ್ಫ್ ಪ್ರದೇಶದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಎಲ್ಲರೂ ಸಂಯಮದಿಂದ ವರ್ತಿಸಬೇಕು, ಉದ್ವಿಗ್ನತೆಯನ್ನು ತಪ್ಪಿಸಬೇಕು ಮತ್ತು ನಾಗರಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು" ಎಂದು MEA ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅಲ್ಲಿರುವ ಭಾರತೀಯರ ಸುರಕ್ಷತೆ ಕುರಿತ ಆತಂಕವೂ ವ್ಯಕ್ತವಾಗಿದೆ. ನಗರಗಳ ಸಮೀಪವಿರುವ ಅಮೆರಿಕದ ನೆಲೆಗಳ ಮೇಲೆ ಇರಾನ್ ಪ್ರತಿದಾಳಿಗಳು ನಡೆದಿರುವ ಮಾಹಿತಿ ಲಭ್ಯವಾಗಿದೆ. "ಈ ಪ್ರದೇಶದಲ್ಲಿನ ನಮ್ಮ ರಾಯಭಾರ ಕಚೇರಿಗಳು ಭಾರತೀಯ ಪ್ರಜೆಗಳೊಂದಿಗೆ ಸಂಪರ್ಕದಲ್ಲಿವೆ. ಜಾಗರೂಕರಾಗಿರಲು, ರಾಯಭಾರ ಕಚೇರಿಗಳೊಂದಿಗೆ ಸಂಪರ್ಕದಲ್ಲಿರಲು ಮತ್ತು ಸ್ಥಳೀಯ ಭದ್ರತಾ ಮಾರ್ಗಸೂಚಿಗಳನ್ನು ಅನುಸರಿಸಲು ಅವರನ್ನು ಕೇಳಲಾಗಿದೆ" ಎಂದು MEA ತಿಳಿಸಿದೆ.
ಯುದ್ಧ ವಿಮಾನಗಳು, ಕ್ಷಿಪಣಿಗಳು ಹಾಗೂ ಡ್ರೋನ್ಗಳ ಹಾರಾಟ ಮುಂದುವರಿದಿರುವುದರಿಂದ ಮಧ್ಯಪ್ರಾಚ್ಯ/ಪಶ್ಚಿಮ ಏಷ್ಯಾ ಪ್ರದೇಶದ ವಾಯುಪ್ರದೇಶದ ಕೆಲವು ಭಾಗಗಳು ಮುಚ್ಚಲ್ಪಟ್ಟಿವೆ. ಇದರ ಪರಿಣಾಮವಾಗಿ ತಕ್ಷಣದ ಸ್ಥಳಾಂತರ ಯೋಜನೆಗಳ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.
ಇದಕ್ಕೂ ಮುನ್ನ ನಾಗರಿಕ ವಿಮಾನಯಾನ ಸಚಿವಾಲಯವು ಪರಿಸ್ಥಿತಿಯ ಸಮಗ್ರ ಪರಿಶೀಲನೆ ನಡೆಸಿರುವುದಾಗಿ ತಿಳಿಸಿದೆ. ಸಚಿವ ಕೆ. ರಾಮ್ ಮೋಹನ್ ಸಂಬಂಧಪಟ್ಟ ಎಲ್ಲಾ ಪಾಲುದಾರರೊಂದಿಗೆ ಸನ್ನದ್ಧತೆ ಹಾಗೂ ಪ್ರತಿಕ್ರಿಯಾ ಕ್ರಮಗಳ ಅವಲೋಕನ ನಡೆಸಿದ್ದು, ಅಂತರರಾಷ್ಟ್ರೀಯ ವಾಯು ಕಾರ್ಯಾಚರಣೆಗಳ ಮೇಲಿನ ಪರಿಣಾಮವನ್ನು ಪರಿಶೀಲಿಸಿದ್ದಾರೆ ಎಂದು ಸಚಿವಾಲಯದ ಪ್ರಕಟಣೆ ಹೇಳಿದೆ.
ಮಧ್ಯಪ್ರಾಚ್ಯದಲ್ಲಿ 90 ಲಕ್ಷಕ್ಕೂ ಹೆಚ್ಚು ಭಾರತೀಯರು ವಾಸಿಸುತ್ತಿದ್ದಾರೆ. ಇವರಲ್ಲಿ ಬಹುತೇಕರು ಯುಎಇಯಲ್ಲಿದ್ದು, ಸುಮಾರು 10,000 ಮಂದಿ ಇರಾನ್‌ನಲ್ಲಿ ನೆಲೆಸಿದ್ದಾರೆ.
ಪ್ರಮುಖ ವಿಮಾನಯಾನ ಸಂಸ್ಥೆಗಳಾದ ಏರ್ ಇಂಡಿಯಾ ಮತ್ತು ಇಂಡಿಗೊ ಮಧ್ಯಪ್ರಾಚ್ಯಕ್ಕೆ ಮತ್ತು ಅಲ್ಲಿಂದ ಸೇವೆಗಳನ್ನು ಈಗಾಗಲೇ ಸ್ಥಗಿತಗೊಳಿಸಿವೆ.
"ನಾಗರಿಕ ವಿಮಾನಯಾನ ಸಚಿವಾಲಯವು ವಿದೇಶಾಂಗ ಸಚಿವಾಲಯದೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಸುಗಮ ಮಾಹಿತಿ ವಿನಿಮಯ ಮತ್ತು ಸಮನ್ವಯವನ್ನು ಖಚಿತಪಡಿಸಿಕೊಳ್ಳಲಿದೆ" ಎಂದು ಪ್ರಕಟಣೆ ತಿಳಿಸಿದೆ.

