ನ್ಯೂಯಾರ್ಕ್: ನ್ಯೂಯಾರ್ಕ್‌ನ ಲಾಗ್ವಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಲ್ಯಾಂಡಿಂಗ್ ವೇಳೆ ಅಗ್ನಿಶಾಮಕ ವಾಹನವೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಪೈಲಟ್ ಹಾಗೂ ಸಹ ಪೈಲಟ್ ಮೃತಪಟ್ಟಿರುವ ಘಟನೆ ರವಿವಾರ ತಡರಾತ್ರಿ ನಡೆದಿದೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ಘಟನೆ ಬಳಿಕ, ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.
ರವಿವಾರ ತಡರಾತ್ರಿ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ಎಕ್ಸ್ ಪ್ರೆಸ್ ವಿಮಾನ ಭೂಸ್ಪರ್ಶ ಮಾಡುತ್ತಿದ್ದಂತೆಯೇ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಅಗ್ನಿಶಾಮಕ ವಾಹನಕ್ಕೆ ಢಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ವಿಮಾನದ ಪೈಲಟ್ ಹಾಗೂ ಸಹ ಪೈಲಟ್ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಅಪಘಾತಕ್ಕೀಡಾದ ಅಗ್ನಿಶಾಮಕ ವಾಹನವನ್ನು ಸರ್ಜೆಂಟ್ ಹಾಗೂ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳು ಚಲಾಯಿಸುತ್ತಿದ್ದರು. ಅವರ ಕಾಲುಗಳು ಮುರಿದಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ವಿಮಾನದ ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ವಿಮಾನವು ಸ್ಥಳೀಯ ಕಾಲಮಾನ ರಾತ್ರಿ 11.37ಕ್ಕೆ ಭೂಸ್ಪರ್ಶ ಮಾಡಿದೆ.

