ನವದೆಹಲಿ: ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಲಭ್ಯವಿರುವ ಅಧಿಕಾರವನ್ನು ಬಳಸಿಕೊಂಡು ಸೊನಮ್ ವಾಂಗ್ಚೂಕ್ ಅವರ ಬಂಧನವನ್ನು ರದ್ದುಗೊಳಿಸಿದ್ದು, ಈ ಆದೇಶ ತಕ್ಷಣದಿಂದ ಜಾರಿಗೆ ಬರುವಂತೆ ಕೇಂದ್ರ ಪ್ರಕಟಣೆ ಹೊರಡಿಸಿದೆ.
ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಹೋರಾಟ ನಡೆಸಿದ ಕಾರಣಕ್ಕೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ವಾಂಗ್ಚೂಕ್ ಅವರನ್ನು ಸೆ.26ರಂದು ಬಂಧಿಸಲಾಯಿತು. ಇದನ್ನು ಪ್ರಶ್ನಿಸಿ ವಾಂಗ್ಚೂಕ್ ಪತ್ನಿ ಗೀತಾಂಜಲಿ ಅವರು ಸುಪ್ರೀಂ ಮೆಟ್ಟಿಲೇರಿದ್ದರು.
ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸಲಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಆ ವೇಳೆ 4 ಮಂದಿ ಸಾವಿಗೀಡಾಗಿ, 90 ಮಂದಿ ಗಾಯಗೊಂಡಿದ್ದರು.

