ಪಾಟ್ನಾ: ಗುಟ್ಕಾ ತಿಂದು ಉಗಿಯುವಾಗ ವೇಗವಾಗಿ ಬಂದ ಪಾಟ್ನಾ-ಹೌರಾ ಮಾರ್ಗದಲ್ಲಿ ಚಲಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಪಾಟ್ನಾದ ಪೂರ್ವ ಮಧ್ಯ ರೈಲ್ವೆಯ ದಾನಾಪುರ ವಿಭಾಗದ ಬರ್ಹ್ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದೆ.
'ಬೆಳಿಗ್ಗೆ 9 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬರು ತಂಬಾಕು ಅಗೆಯುತ್ತ ರೈಲ್ವೆ ಪ್ಲಾಟ್‌ಫಾರ್ಮ್‌ನ ಅಂಚಿಗೆ ಹೋಗಿದ್ದಾರೆ. ಇದೇ ವೇಳೆ ಪಾಟ್ನಾ-ಹೌರಾ ಮಾರ್ಗದಲ್ಲಿ ವೇಗವಾಗಿ ಬಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವ್ಯಕ್ತಿಗೆ ಡಿಕ್ಕಿ ಹೊಡೆದಿದೆ' ಎಂದು ರೈಲ್ವೆಯ ಆರ್‌ಪಿಎಫ್ ಕಮಾಂಡೆಂಟ್ ಉದಯ್ ಸಿಂಗ್ ಪವಾರ್ ಹೇಳಿದ್ದಾರೆ.
ಘಟನೆ ಬಳಿಕ ಸ್ಥಳಕ್ಕೆ ಆಗಮಿಸಿದ ರೈಲ್ವೆ ಅಧಿಕಾರಿಗಳು ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಲೆಗೆ ತೀವ್ರವಾಗಿ ಪೆಟ್ಟು ಬಿದ್ದ ಕಾರಣ ವ್ಯಕ್ತಿಯು ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮೃತರು ಯಾರು? ಎಂಬುದು ಈವರೆಗೆ ಪತ್ತೆಯಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಜಿಆರ್‌ಪಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಭವಿಷ್ಯದಲ್ಲಿ ಇಂತಹ ಅಪಘಾತಗಳನ್ನು ತಪ್ಪಿಸಲು, ರೈಲುಗಳು ಪ್ಲಾಟ್‌ಫಾರ್ಮ್‌ಗೆ ಆಗಮಿಸುವ ಸಂದರ್ಭದಲ್ಲಿ ಪ್ರಯಾಣಿಕರು ದೂರವಿರಿ ಎಂದು ರೈಲ್ವೆ ಇಲಾಖೆಯು ಸೂಚನೆ ನೀಡಿದೆ.

