ಕಾಸರಗೋಡು: ಅಭಿವೃದ್ಧಿ ಕಾರ್ಯಗಳಿಗೆ ಕಾಸರಗೋಡು ಜಿಲ್ಲೆ ಹೆಚ್ಚಿನ ಸಾಧ್ಯತೆಯಿರುವ ಪ್ರದೇಶವಾಗಿದ್ದು, ಹೆಚ್ಚಿನ ನಿರೀಕ್ಷೆ ಹಾಗೂ ಕಾಳಜಿಯೊಂದಿಗೆ ಮುಂದಿನ ಕೆಲಸಕಾರ್ಯಗಳಲ್ಲಿ ತನ್ನನ್ನುತೊಡಗಿಸಿಕೊಳ್ಳಲಿರುವುದಾಗಿ ನೂತನ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಚೇಂಬರ್‍ನಲ್ಲಿ ನಡೆದ ಸಮಾರಂಭದಲ್ಲಿ ಹಾಲಿ ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಅವರಿಂದ ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದರು. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಚರ್ಚಿಸಿ, ಈ ಹಿಂದಿನ ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಅವರು ಅಳವಡಿಸಿರುವ ಯೋಜನೆಗಳನ್ನು ಮುಂದುವರಿಸಲಾಗುವುದು.ಈಗಾಗಲೇ ಏಳು ಜಿಲ್ಲೆಗಳಲ್ಲಿ ಕರ್ತವ್ಯನಿರ್ವಹಿಸಿದ್ದು, ಎಂಟನೇ ಜಿಲ್ಲೆಯಾಗಿ ಕಾಸರಗೋಡಿಗೆ ವರ್ಗಾವಣೆಗೊಂಡು ಆಗಮಿಸಿದ್ದೇನೆ. ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸಕಾರ್ಯಗಳ ಬಗ್ಗೆ ಯೋಜನೆ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.
ವರ್ಗಾವಣೆಗೊಂಡು ತೆರಳುತ್ತಿರುವ ಕೆ. ಇನ್ಬಾಶಖರ್ ಅವರುಹೂಗುಚ್ಛ ನೀಡಿ ನಿಯೋಜಿತ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯ ಅವರನ್ನು ಸ್ವಾಗತಿಸಿದರು. ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಪಿ. ಅಖಿಲ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿವಿಲ್‍ಸ್ಟೇಶನ್ ಸಿಬ್ಬಂದಿ ಉಪಸ್ಥಿತರಿದ್ದರು.



