ನವದೆಹಲಿ: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಉಲ್ಬಣಗೊಂಡಿದ್ದು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧವು 11ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮವಾಗಿ ಕಚ್ಚಾ ತೈಲ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ದರವು ಪ್ರತೀ ಬ್ಯಾರಲ್ ದರವು ಶೇ 23.63ರಷ್ಟು ಹೆಚ್ಚಳವಾಗಿದ್ದು, ಪ್ರತೀ ಬ್ಯಾರಲ್ ದರವು 114 ಡಾಲರ್ ಆಗಿದೆ.
ಇಸ್ರೇಲ್ ಮೇಲೆ ದಾಳಿ ನಡೆಸುತ್ತಿರುವ ಇರಾನ್, ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ತಡೆಯೊಡ್ಡಿರುವ ಪರಿಣಾಮ ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
'ಹಾರ್ಮುಜ್' ಜಲಸಂಧಿ ಮೂಲಕವೇ ಜಗತ್ತಿನ ವಿವಿಧ ದೇಶಗಳಿಗೆ ತೈಲ ಪೂರೈಕೆಯಾಗುತ್ತದೆ. ಮಧ್ಯಪ್ರಾಚ್ಯ ಬಿಕ್ಕಟ್ಟು ಉಲ್ಬಣಗೊಂಡಿದ್ದು, ಈ ಮಾರ್ಗದಲ್ಲಿ ಸರಕು ಸಾಗಣೆ ಹಡಗುಗಳ ಸಂಚಾರಕ್ಕೆ ಅಡ್ಡಿಯಾಗಿದೆ.
'ಹಾರ್ಮುಜ್' ಜಲಸಂಧಿ ಮೂಲಕ ಸೌದಿ ಅರೇಬಿಯಾ, ಇರಾಕ್, ಯುಎಇಯಿಂದ ಭಾರತಕ್ಕೆ ಕಚ್ಚಾ ತೈಲ ಮತ್ತು ಎಲ್‌ಎನ್‌ಜಿ ಪೂರೈಕೆಯಾಗುತ್ತಿದೆ.

