ತಿರುವನಂತಪುರಂ: ಒಮಾನ್‌ನಲ್ಲಿ ಭಾರಿ ಮಳೆಯಿಂದಾಗಿ ಉಂಟಾದ ದಿಢೀರ್ ಪ್ರವಾಹದಲ್ಲಿ ಇಬ್ಬರು ಭಾರತೀಯರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕೇರಳ ಮೂಲದ ಇಬ್ಬರು ಮೃತಪಟ್ಟಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂದರ್ಭದಲ್ಲಿ ತುರ್ತು ನೆರವಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇರಳ ವಿಧಾನಸಭೆ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ಒತ್ತಾಯಿಸಿದ್ದಾರೆ.
ವರದಿಗಳ ಪ್ರಕಾರ, ವಾಹನದಲ್ಲಿ ಸಂಚರಿಸುತ್ತಿದ್ದ ಸಂದರ್ಭದಲ್ಲಿ ಭೀಕರ ಪ್ರವಾಹಕ್ಕೆ ತುತ್ತಾಗಿದ್ದರು. ಕೇರಳದ ತೃಥಲ ಮೂಲದ ಯೂಸುಫ್ ಮತ್ತು ಶಮ್ಲಾ ಮೃತರು.
ಒಮಾನ್ ಪ್ರವಾಹದ ಕುರಿತು ಕಳವಳ ವ್ಯಕ್ತಪಡಿಸಿರುವ ಸತೀಶನ್, ಪ್ರಧಾನಿಗೆ ಪತ್ರ ಬರೆದಿದ್ದಾರೆ. ಅಲ್ಲದೆ ಒಮಾನ್ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಕೇಂದ್ರ ಸರ್ಕಾರವು ಅಗತ್ಯ ಕ್ರಮ ಕೈಕೊಳ್ಳಬೇಕು. ರಕ್ಷಣಾ ಕಾರ್ಯಾಚರಣೆ ತ್ವರಿತಗೊಳಿಸಲು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸಂತ್ರಸ್ತರ ಕುಟುಂಬಗಳಿಗೆ ಸಹಾಯವನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.


