ನವದೆಹಲಿ: ಪಶ್ಚಿಮ ಏಷ್ಯಾ ಸಂಘರ್ಷದಿಂದ ದೇಶದಲ್ಲಿ ಎಲ್‌ಪಿಜಿ ಕೊರತೆ ಉಂಟಾಗಿದ್ದು, ಅದನ್ನು ಸರಿದೂಗಿಸಲು ನಗರ ಪ್ರದೇಶಗಳಲ್ಲಿ ಕೊಳವೆ ಮೂಲಕ ಸರಬರಾಜಾಗುವ ನೈಸರ್ಗಿಕ ಅನಿಲ (ಪಿಎನ್‌ಜಿ) ಸಂಪರ್ಕ ವಿಸ್ತರಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ.
ಈ ಕುರಿತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರು ಮಾತನಾಡಿದ್ದಾರೆ.
ನಗರಗಳ ಪ್ರತಿಯೊಂದು ಮೂಲೆಗೂ ಪಿಎನ್‌ಜಿ ಸಂಪರ್ಕ ಸಿಗುವಂತೆ ವ್ಯವಸ್ಥೆ ರೂಪಿಸಿದ್ದು, ಹೊಸದಾಗಿ 50 ಲಕ್ಷ ಪಿಎನ್‌ಜಿ ಸಂಪರ್ಕ ಕಲ್ಪಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.
ಪಿಎನ್‌ಜಿಯು ಜಾಗತಿಕ ಇಂಧನ ಕೊರತೆಗೆ ಪರ್ಯಾಯವಾಗಿದೆ. ನಗರ ಪ್ರದೇಶಗಳಲ್ಲಿ ಇದರ ಸಂಪರ್ಕವನ್ನು ಹೆಚ್ಚಿಸಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳು ಕೂಡ ಪಿಎನ್‌ಜಿ ಬಳಕೆಗೆ ಉತ್ತೇಜನ ನೀಡಬೇಕು. ಅದರಲ್ಲೂ ಪಿಎನ್‌ಜಿ ಸಂಪರ್ಕಕ್ಕೆ ಬೇಕಾದ ಮೂಲಭೂತ ಸೌಕರ್ಯಗಳು ಲಭ್ಯವಿರುವ ಕಡೆಗಳಲ್ಲಿ ಅದನ್ನು ಬಳಸುವಂತೆ ಪ್ರಚಾರ ಮಾಡಬೇಕು ಎಂದು ಹೇಳಿದ್ದಾರೆ.
ಅಮೆರಿಕ ಮತ್ತು ಇಸ್ರೇಲ್ ದಾಳಿ ಮಾಡುತ್ತಿರುವ ಪರಿಣಾಮವಾಗಿ ಇರಾನ್, ಹೊರ್ಮುಜ್ ಜಲಸಂಧಿಯ ಮೇಲಿನ ಹಿಡಿತವನ್ನು ಬಿಗಿಗೊಳಿಸಿದೆ. ಇದರಿಂದ ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಎಲ್‌ಪಿಜಿ ಕೊರತೆ ಉಂಟಾಗಿದೆ.

