ನವದೆಹಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟರ್ ಹಾಗೂ ಸಾರ್ವಜನಿಕವಾಗಿ ಹೇಳಿಕೆ ನೀಡುವ ಮೂಲಕ ತಪ್ಪು ಮಾಹಿತಿ ನೀಡುತ್ತಿರುವ ವ್ಯಕ್ತಿ ಮತ್ತು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸುವ ಮೂಲಕ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸುಪ್ರೀಂಕೋರ್ಟ್, 2024ರ ಅಕ್ಟೋಬರ್ 4ರಂದು ಐದು ಮಂದಿ ಸ್ವತಂತ್ರ ಸಮಿತಿಯನ್ನು ರಚಿಸಿತ್ತು. ನ್ಯಾಯಾಲಯವನ್ನು ರಾಜಕೀಯ ಯುದ್ಧ ಭೂಮಿಯಾಗಿ ಪರಿವರ್ತಿಸಲು ಅವಕಾಶ ನೀಡುವುದಿಲ್ಲ ಎಂದು ಈ ಹಿಂದೆ ಸ್ಪಷ್ಟಪಡಿಸಿತ್ತು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಲ್‌ಮಾಲ್ಯಾ ಬಾಗ್ಚಿ ಅವರನ್ನು ಒಳಗೊಂಡ ನ್ಯಾಯಪೀಠ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ' ಎಂದು ಅರ್ಜಿದಾರರಿಗೆ ತಿಳಿಸಿತು.
'ನೀವು ತಜ್ಞರಾಗಲು ಕಾರಣವೇನು? ಹೋಗಿ ಅಧಿಕಾರಿಗೆ ತಿಳಿಸಿ' ಎಂದು ಅರ್ಜಿದಾರರ ಪರ ವಕೀಲರಿಗೆ ನ್ಯಾಯಪೀಠ ತಿಳಿಸಿತು.
ತನಿಖಾ ಸಂಸ್ಥೆಯಲ್ಲಿ ಏನೇ ಕಂಡುಹಿಡಿದರು ಕೂಡ ಅದನ್ನು ನ್ಯಾಯಾಲಯದ ಮುಂದೆ ಮಂಡಿಸಲಾಗುತ್ತದೆ ಎಂದು ಸಿಜೆಐ ತಿಳಿಸಿದರು.
'ಶಂಕಿತರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದೆ. ತನಿಖಾ ಸಂಸ್ಥೆಯ ಮೇಲೆ ನಂಬಿಕೆಯಿಡಿ. ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ನಿಮ್ಮ ಅರ್ಜಿಯನ್ನು ಮಾನ್ಯ ಮಾಡಲು ಸಾಧ್ಯವಿಲ್ಲ' ಎಂದು ತಿಳಿಸಿತು.

