ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸಾರಿಗೆ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಮನಗರದ ಕಗೋರ್ಟ್ ಗ್ರಾಮದ ಬಳಿ ಬಸ್ ತಿರುವಿನಲ್ಲಿ ಸಾಗುತ್ತಿದ್ದಾಗ ಅವಘಡ ಸಂಭವಿಸಿದೆ.
ಅಪಘಾತ ನಡೆದ ಕೂಡಲೇ ಸ್ಥಳೀಯರು ಸೇರಿದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದಿದ್ದಾರೆ.
ಬಸ್ ಉಧಂಪುರಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇದುವರೆಗೆ 15 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಗಾಯಗೊಂಡ 20 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಅಪಘಾತ ಕುರಿತು ಉಧಂಪುರ ಜಿಲ್ಲಾಧಿಕಾರಿ ಮಿಂಗಾ ಶೇರ್ಪಾ ಅವರೊಂದಿಗೆ ಚರ್ಚಿಸಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಏರ್‌ಲಿಫ್ಟ್ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
'ರಾಮನಗರದಿಂದ ಉಧಂಪುರಕ್ಕೆ ಹೋಗುತ್ತಿದ್ದ ಸಾರಿಗೆ ಬಸ್ ಅಪಘಾತಕ್ಕೀಡಾದ ಸುದ್ದಿ ತಿಳಿದ ಕೂಡಲೇ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ತಕ್ಷಣವೇ ರಕ್ಷಣಾ ಕಾರ್ಯ ಕೈಗೊಳ್ಳಲಾಗಿದೆ. ಹೆಚ್ಚಿನ ಸಾವುನೋವು ಸಂಭವಿಸುವ ಸಾಧ್ಯತೆಯಿದ್ದು, ಗಾಯಾಳುಗಳನ್ನು ಏರ್‌ಲಿಫ್ಟ್ ಮಾಡಲು ವ್ಯವಸ್ಥೆ ಮಾಡಲಾಗುತ್ತಿದೆ' ಎಂದು ಸಿಂಗ್ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

