ನವದೆಹಲಿ: 2029ರ ಲೋಕಸಭಾ ಚುನಾವಣೆಗೂ ಮುನ್ನ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜಾರಿಗೆ ತರುವ ಮತ್ತು ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು 816ಕ್ಕೆ ಹೆಚ್ಚಿಸುವ ಕರಡು ಮಸೂದೆಗಳಿಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ತಿಳಿದುಬಂದಿದೆ. 816 ಕ್ಷೇತ್ರಗಳ ಪೈಕಿ 273 ಕ್ಷೇತ್ರಗಳಲ್ಲಿ ಮಹಿಳಾ ಮೀಸಲಾತಿಗೆ ಪ್ರಸ್ತಾಪಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು, ನಾರಿ ಶಕ್ತಿ ವಂದನಾ ಅಧಿನಿಯಮ ಅಥವಾ ಮಹಿಳಾ ಮೀಸಲಾತಿ ಕಾಯ್ದೆ ಎಂದು ಕರೆಯಲ್ಪಡುವ ಕಾನೂನಿಗೆ ತಿದ್ದುಪಡಿ ಮಾಡುವ ಕರಡು ಮಸೂದೆಗಳಿಗೆ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಸಂವಿಧಾನ ತಿದ್ದುಪಡಿ ಮಸೂದೆಯು ನಾರಿ ಶಕ್ತಿ ವಂದನಾ ಅಧಿನಿಯಮ ಅಧಿನಿಯಮವನ್ನು ತಿದ್ದುಪಡಿ ಮಾಡಿದರೆ, ಮತ್ತೊಂದು ಸಾಮಾನ್ಯ ಮಸೂದೆಯು ಕ್ಷೇತ್ರಗಳ ಪುನರ್ ವಿಂಗಡಣೆಗೆ ಅನುವು ಮಾಡಿಕೊಡಲು ಕ್ಷೇತ್ರ ಪುನರ್ ವಿಂಗಡಣಾ ಕಾಯ್ದೆಯನ್ನು ತಿದ್ದುಪಡಿ ಮಾಡುತ್ತದೆ. ವಿಧಾನಸಭೆ ಹೊಂದಿರುವ ಮೂರು ಕೇಂದ್ರಾಡಳಿತ ಪ್ರದೇಶಗಳಾದ ದೆಹಲಿ, ಜಮ್ಮು ಮತ್ತು ಕಾಶ್ಮೀರ ಮತ್ತು ಪುದುಚೇರಿಯಲ್ಲಿ ಕಾನೂನಿನ ಅನುಷ್ಠಾನವನ್ನು ಇನ್ನೊಂದು ಮಸೂದೆ ಖಚಿತಪಡಿಸುತ್ತದೆ ಎಂದು ವರದಿ ತಿಳಿಸಿದೆ.
ಸಂಸತ್ತಿನ ಬಜೆಟ್ ಅಧಿವೇಶನವನ್ನು ಸರ್ಕಾರ ವಿಸ್ತರಿಸಿದ್ದು, ಏಪ್ರಿಲ್ 16ರಿಂದ 18ರವರೆಗೆ ಮೂರು ದಿನ ವಿಶೇಷ ಅಧಿವೇಶನ ನಡೆಯಲಿದೆ. ಈ ಅವಧಿಯಲ್ಲೇ ತಿದ್ದುಪಡಿ ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ.
2023ರಲ್ಲಿ ಸಂವಿಧಾನ ತಿದ್ದುಪಡಿ ಮೂಲಕ ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಶೇ 33ರಷ್ಟು ಮೀಸಲಾತಿ ಜಾರಿಗೆ ತರಲಾಗಿದೆ. ಆದರೆ, 2027ರ ಜನಗಣತಿ ಆಧಾರದ ಮೇಲೆ ನಡೆಯುವ ಕ್ಷೇತ್ರ ಪುನರ್ ವಿಂಗಡಣೆ ಆಧರಿಸಿ ಜಾರಿಗೆ ತರಲು ನಿರ್ಧರಿಸಲಾಗಿತ್ತು. ಹಾಗಾಗಿ, 2034ಕ್ಕ ಜಾರಿಯಾಗುವ ನಿರೀಕ್ಷೆ ಇದೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ 543 ರಿಂದ 816ಕ್ಕೆ ಹೆಚ್ಚಿಸಲಾಗುತ್ತದೆ. ಇದರಲ್ಲಿ 273 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು. ಕ್ಷೇತ್ರಗಳ ಮರುವಿಂಗಡಣೆಯನ್ನು ಪ್ರಸ್ತಾವಿತ 2027ರ ಜನಗಣತಿಯ ಬದಲಿಗೆ 2011ರ ಜನಗಣತಿಯ ಆಧಾರದ ಮೇಲೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

