ಲಖನೌ: ದ್ವಿ ಪೌರತ್ವ ವಿವಾದಕ್ಕೆ ಸಂಬಂಧಿಸಿದಂತೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ಶುಕ್ರವಾರ(ಏ 17) ಆದೇಶಿಸಿದೆ.
ಎಫ್‌ಐಆರ್ ದಾಖಲಾದ ನಂತರ, ರಾಜ್ಯ ಸರ್ಕಾರವು ಈ ವಿಷಯದ ಬಗ್ಗೆ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಯ ಸಹಾಯ ಪಡೆಯಬಹುದು ಎಂದು ನ್ಯಾಯಾಲಯ ಹೇಳಿದೆ.
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಗಾಂಧಿಯವರ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ವಿಶೇಷ ಜನಪ್ರತಿನಿದಿಗಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಅರ್ಜಿದಾರ ಎಸ್. ವಿಘ್ನೇಶ್ ಶಿಶಿರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುಭಾಷ್ ವಿದ್ಯಾರ್ಥಿ ಅವರ ಪೀಠವು ಈ ಆದೇಶ ನೀಡಿದೆ.
ಪೌರತ್ವಕ್ಕೆ ಸಂಬಂಧಿಸಿದ ಪ್ರಕರಣಗಳ ಬಗ್ಗೆ ವಿಚಾರಣೆ ನಡೆಸುವ ಅಧಿಕಾರ ಇಲ್ಲ ಎಂದು ವಿಶೇಷ ನ್ಯಾಯಾಲಯವು ಹೇಳಿತ್ತು.
ಕರ್ನಾಟಕದ ಬಿಜೆಪಿ ಕಾರ್ಯಕರ್ತರಾಗಿರುವ ಅರ್ಜಿದಾರರು, ರಾಹುಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ(ಬಿಎನ್‌ಎಸ್) ಅಧಿಕೃತ ರಹಸ್ಯ ಕಾಯ್ದೆ, ವಿದೇಶಿಯರ ಕಾಯ್ದೆ ಮತ್ತು ಪಾಸ್‌ಪೋರ್ಟ್ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿ ವಿಸ್ತೃತ ತನಿಖೆಗೆ ಕೋರಿದ್ದರು.

