ನವದೆಹಲಿ: ಮೇ 3ರಂದು ನಡೆದ ನೀಟ್-ಯುಜಿ 2026 ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ತಿಳಿಸಿದೆ.
ನೀಟ್ ಮರು ಪರೀಕ್ಷೆ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಎನ್‌ಟಿಎ ಪ್ರಕಟಣೆ ತಿಳಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆಗಳ ವರದಿಯ ಆಧಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ನೀಟ್-ಯುಜಿ ಪರೀಕ್ಷೆ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಎನ್‌ಟಿಎ ತಿಳಿಸಿದೆ.
ಸಿಬಿಐ ತನಿಖೆ....
ನೀಟ್ ಪರೀಕ್ಷೆಯ ಅಕ್ರಮಗಳ ಕುರಿತು ಕೇಂದ್ರ ಸರ್ಕಾರವು ಸಿಬಿಐ ತನಿಖೆಗೆ ಆದೇಶಿಸಿದೆ. ಈ ನಿಟ್ಟ್ಟಿನಲ್ಲಿ ವಿಚಾರಣೆಗೆ ಬೇಕಾದ ಸಂಪೂರ್ಣ ಸಹಕಾರ ನೀಡುವುದಾಗಿ ಎನ್‌ಟಿಎ ಹೇಳಿದೆ.
ಮರು ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಹೊಸ ನೋಂದಣಿಯ ಅಗತ್ಯ ಇರುವುದಿಲ್ಲ. ಹೆಚ್ಚುವರಿ ಪರೀಕ್ಷಾ ಶುಲ್ಕ ವಿಧಿಸಲಾಗುವುದಿಲ್ಲ. ಅಲ್ಲದೆ ಈಗಾಗಲೇ ಪಾವತಿಸಿರುವ ಶುಲ್ಕವನ್ನು ಹಿಂತಿರುಗಿಸಲಾಗುವುದು ಎಂದಿದೆ.
ಮರು ಪರೀಕ್ಷೆಗೆ ಸಂಬಂಧಿಸಿದಂತೆ ಎನ್‌ಟಿಎ ಅಧಿಕೃತ ವೆಬ್‌ಸೈಟ್ ಮೂಲಕವೇ ಮಾಹಿತಿ ಪಡೆದುಕೂಳ್ಳಬೇಕು ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ವಿನಂತಿಸಿದೆ.
ಈ ಮೊದಲು ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿತ್ತು.

