ಪಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಸೇರಿದಂತೆ ಜೆಡಿಯು- ಬಿಜೆಪಿ ನೇತೃತ್ವದ ಮೈತ್ರಿಕೂಟದ 31 ಶಾಸಕರು ನೂತನ ಸಚಿವರಾಗಿ ಇಂದು (ಗುರುವಾರ) ಪಮಾಣವಚನ ಸ್ವೀಕರಿಸಿದ್ದಾರೆ.
ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ಬಿಜೆಪಿ ಅಧ್ಯಕ್ಷ ನಿತಿನ್ ನವೀನ್ ಪಾಲ್ಗೊಂಡಿದ್ದರು.
ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸಯ್ಯದ್ ಅತಾ ಹಸ್ನೈನ್ ಅವರು ನೂತನ ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.
ಸಂಪುಟಕ್ಕೆ ನಿಶಾಂತ್ ಕುಮಾರ್ ಸೇರ್ಪಡೆ:
ಕಳೆದ ತಿಂಗಳು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯಸಭೆ ಪ್ರವೇಶಿಸಿದ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಯ 15 ಶಾಸಕರು, ಜೆಡಿಯುನಿಂದ 13 ಮಂದಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಏಪ್ರಿಲ್ 15ರಂದು ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಮತ್ತು ಇಬ್ಬರು ಉಪಮುಖ್ಯಮಂತ್ರಿಗಳಷ್ಟೆ (ವಿಜಯ್ ಕುಮಾರ್ ಚೌಧರಿ ಮತ್ತು ಬಿಜೇಂದ್ರ ಪ್ರಸಾದ್ ಯಾದವ್) ಪ್ರಮಾಣವಚನ ಸ್ವೀಕರಿಸಿದ್ದರು. ಇಂದು ಪ್ರಮಾಣ ವಚನ ಸ್ವೀಕರಿಸಿರುವ ಸಚಿವರಿಗೆ ಇನ್ನಷ್ಟೇ ಖಾತೆ ಹಂಚಿಕೆಯಾಗಬೇಕಿದೆ.

