ಕ್ವೆಟ್ಟಾ: ಪ್ರಾಂತೀಯ ಸರ್ಕಾರ ಕೈಗೊಂಡ ಶೈಕ್ಷಣಿಕ ಸುಧಾರಣಾ ಕ್ರಮಗಳು ಸಕಾರಾತ್ಮಕ ಫಲಿತಾಂಶ ನೀಡುತ್ತಿವೆ. ಕಳೆದ ಎರಡು ವರ್ಷಗಳಲ್ಲಿ ಸುಮಾರು 7.17 ಲಕ್ಷ ಮಕ್ಕಳು ಸರ್ಕಾರಿ ಶಾಲೆಗಳಿಗೆ ದಾಖಲಾಗಿದ್ದಾರೆ ಎಂದು ಬಲೂಚಿಸ್ತಾನ ಮುಖ್ಯಮಂತ್ರಿ ಮೀರ್ ಸರ್ಫರಾಜ್ ಬುಗ್ತಿ ತಿಳಿಸಿದ್ದಾರೆ.
ಸುಧಾರಣಾ ಕ್ರಮಗಳ ಪರಿಣಾಮವಾಗಿ, ದಾಖಲಾತಿ ಪ್ರಮಾಣ ಶೇ 11ರಷ್ಟು ಹೆಚ್ಚಾಗಿದೆ. ಹಾಗೆಯೇ, ಮಕ್ಕಳು ಅರ್ಧದಲ್ಲೇ ಶಾಲೆ ಬಿಡುವ ಪ್ರಮಾಣ ಶೇ 5ರಷ್ಟು ಕಡಿಮೆಯಾಗಿದೆ. ಇದು ಸರ್ಕಾರದ ನೀತಿಗಳು ಮತ್ತು ಸಾರ್ವಜನಿಕ ಶಿಕ್ಷಣದ ಮೇಲೆ ಜನರ ವಿಶ್ವಾಸ ಹೆಚ್ಚುತ್ತಿರುವುದರ ಸಂಕೇತವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಬಲೂಚಿಸ್ತಾನ ಹಿಂದುಳಿದಿದೆ ಎಂಬ ಹಣೆಪಟ್ಟಿಯನ್ನು ಹೋಗಲಾಡಿಸಲು, ಮುಂದಿನ ತಲೆಮಾರಿನ ಸುಸ್ಥಿರ ಅಭಿವೃದ್ಧಿಯನ್ನು ಖಾತ್ರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ ಒದಗಿಸುವುದು ನಿರ್ಣಾಯಕವಾಗಿದೆ. ಶೈಕ್ಷಣಿಕ ವ್ಯವಸ್ಥೆಯಲ್ಲಿನ ನಿರ್ಲಕ್ಷ್ಯ, ಭ್ರಷ್ಟಾಚಾರ ಮತ್ತು ಅದಕ್ಷತೆಯನ್ನು ತೊಡೆದುಹಾಕಲು ಸರ್ಕಾರ ಬದ್ಧವಾಗಿದೆ ಎಂದು ಬುಗ್ತಿ ಅವರು ಸಾಮಾಜಿಕ ಮಾಧ್ಯಮ ವೇದಿಕೆ 'ಎಕ್ಸ್'ನಲ್ಲಿ ಬರೆದುಕೊಂಡಿದ್ದಾರೆ.

