ನವದೆಹಲಿ: ಸುಪ್ರೀಂಕೋರ್ಟ್ ನ್ಯಾಯಾಧೀಶರ ಸಂಖ್ಯೆಯನ್ನು 33ರಿಂದ 38ಕ್ಕೆ ಹೆಚ್ಚಿಸುವ ಕೇಂದ್ರ ಸಂಪುಟದ ನಿರ್ಧಾರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರವಿವಾರ ಅನುಮೋದನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಈ ಬಗ್ಗೆ ಪೋಸ್ಟ್ ಮಾಡಿದ್ದು, ಕೇಂದ್ರ ಸರಕಾರದ ಸುಗ್ರೀವಾಜ್ಞೆಯು 1956ರ ಸುಪ್ರೀಂಕೋರ್ಟ್ (ನ್ಯಾಯಾಧೀಶರ ಸಂಖ್ಯೆ) ಕಾಯ್ದೆಯನ್ನು ತಿದ್ದುಪಡಿಗೊಳಿಸಿತ್ತು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟವು ಮೇ 5ರಂದು ಈ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿತ್ತು.
ಸರ್ವೋಚ್ಚ ನ್ಯಾಯಾಲಯವನ್ನು ಬಲಪಡಿಸುವುದು ಹಾಗೂ ಸುಪ್ರೀಂಕೋರ್ಟ್ ಮುಂದೆ 92 ಸಾವಿರಕ್ಕೂ ಅಧಿಕ ಪ್ರಕರಣಗಳು ವಿಚಾರಣೆಗೆ ಬಾಕಿಯಿರುವ ಸಮಯದಲ್ಲಿ ತ್ವರಿತ ನ್ಯಾಯದಾನವನ್ನು ಖಾತರಿಪಡಿಸುವ ಉದ್ದೇಶದಿಂದ ನ್ಯಾಯಾಧೀಶರ ಸಂಖ್ಯೆಯನ್ನು ವಿಸ್ತರಿಸಿದೆ ಎಂದು ಕೇಂದ್ರ ಸರಕಾರ ಹೇಳಿಕೊಂಡಿತ್ತು.

