ಪುಣೆ: ಮಹಾರಾಷ್ಟ್ರದ ಪಿಂಪ್ರಿ ಚಿಂಚ್‌ವಾಡ್‌ಯಲ್ಲಿ ನಕಲಿ ಮದ್ಯ ಸೇವಿಸಿ ಏಳು ಮಂದಿ ಮೃತಪಟ್ಟಿದ್ದಾರೆ.
ಪುಣೆಯಲ್ಲೂ ಕಳೆದ 24 ಗಂಟೆಗಳಲ್ಲಿ ಮೂವರು ಶಂಕಾಸ್ಪದವಾಗಿ ಮೃತಪಟ್ಟಿದ್ದು, ಈ ಸಾವಿಗೂ ನಕಲಿ ಮದ್ಯವೇ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು ಈ ಎರಡೂ ಪ್ರಕರಣಗಳ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಂಪ್ರಿ ಚಿಂಚ್‌ವಾಡ್‌ಯಲ್ಲಿ ಈಗಾಗಲೇ ಎಂಟು ಜನರನ್ನು ವಶಕ್ಕೆ ಪಡೆಯಲಾಗಿದ್ದು, ನಕಲಿ ಮದ್ಯ ಸೇವಿಸಿ ಅಸ್ವಸ್ಥರಾಗಿರುವ ಮೂವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್, ಶಂಕಾಸ್ಪದ ನಕಲಿ ಮದ್ಯ ಸೇವನೆಯಿಂದ ಸಂಭವಿಸಿದ ಏಳು ಸಾವುಗಳ ಕುರಿತು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ನಾವು ತನಿಖೆ ಆರಂಭಿಸಿದ್ದೇವೆ. ನಕಲಿ ಮದ್ಯ ಸೇವನೆಯಿಂದ ಇದುವರೆಗೆ ಏಳು ಜನರು ಮೃತಪಟ್ಟಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸಾವಿಗೆ ನಿಖರ ಕಾರಣ ತಿಳಿಯಲು ವೈದ್ಯಕೀಯ ಪರೀಕ್ಷಾ ವರದಿಗಳಿಗಾಗಿ ಕಾಯುತ್ತಿದ್ದೇವೆ ಎಂದು ಪಿಂಪ್ರಿ ಚಿಂಚ್‌ವಾಡ್ ಉಪ ಪೊಲೀಸ್ ಆಯುಕ್ತರ ಸಂದೀಪ್ ಅಟೋಲೆ ತಿಳಿಸಿದ್ದಾರೆ.

