ನವದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು(ಸಿಬಿಎಸ್‌ಇ) 9ನೇ ತರಗತಿ ವಿದ್ಯಾರ್ಥಿಗಳಿಗೆ ಜುಲೈ 1ರಿಂದ ತ್ರಿಭಾಷಾ ಅಧ್ಯಯನವನ್ನು ಕಡ್ಡಾಯಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ಬಗ್ಗೆ ಮುಂದಿನ ವಾರ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ.
ಎರಡು ಭಾರತೀಯ ಸ್ಥಳೀಯ ಭಾಷೆ ಸೇರಿದಂತೆ ಒಟ್ಟು ಮೂರು ಭಾಷೆಗಳನ್ನು ವಿದ್ಯಾರ್ಥಿಗಳನ್ನು ಅಧ್ಯಯನ ಮಾಡುವಂತೆ ಸಿಬಿಎಸ್‌ಇ ಇತ್ತೀಚಿಗೆ ಹೊರಡಿಸಿರುವ ಆದೇಶದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು.
ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲರಾದ ಮುಕುಲ್ ರೋಹಟಗಿ ಅವರು, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠದ ಮುಂದೆ ಈ ವಿಚಾರವನ್ನು ಪ್ರಸ್ತಾಪಿಸಿದರು.
'ಇದು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಸಲ್ಲಿಸಿರುವ ತುರ್ತು ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಯಾಗಿದ್ದು, ಸೋಮವಾರವೇ ಈ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು' ಎಂದು ಕೋರಿದರು.

