ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಹಾಗೂ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿರುವವರನ್ನು ತಕ್ಷಣ ಬಂಧಿಸುವಂತೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ರಾಜ್ಯದ ಕೆಲವು ಭಾಗಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುರಿತು ಆತಂಕ ವ್ಯಕ್ತವಾಗಿರುವ ನಡುವೆಯೇ ಚುನಾವಣಾ ಆಯೋಗ ಈ ಸೂಚನೆ ನೀಡಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಂಗಳವಾರ ರಾಜ್ಯದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದ ಘಟನೆಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹಲವಾರು ರಾಜಕೀಯ ಪಕ್ಷಗಳ ಕಚೇರಿಗಳು ಲೂಟಿಗೊಳಗಾಗಿವೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ನಿರಂತರ ಗಸ್ತು ತಿರುಗುವಂತೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಮಹಾನಿರ್ದೇಶಕರು, ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಗೆ ಸಿಇಸಿ ಸೂಚನೆ ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
'ಹಿಂಸಾಚಾರ ಪ್ರಚೋದನೆ ಹಾಗೂ ವಿಧ್ವಂಸಕ ಕೃತ್ಯಗಳಿಗೆ ಕಾರಣರಾಗಿರುವವರನ್ನು ತಕ್ಷಣ ಬಂಧಿಸಬೇಕು' ಎಂದು ಸಿಇಸಿಯ ನಿರ್ದೇಶನವನ್ನು ಉಲ್ಲೇಖಿಸಿ ಅವರು ಹೇಳಿದ್ದಾರೆ.
ಕಾನೂನನ್ನು ತ್ವರಿತವಾಗಿ ಮತ್ತು ದೃಢವಾಗಿ ಜಾರಿಗೊಳಿಸುವ ಅಗತ್ಯವಿದೆ ಎಂದು ಮುಖ್ಯ ಚುನಾವಣಾ ಆಯುಕ್ತರು ಸೂಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
'ಹೆಚ್ಚಿನ ಜಾಗರೂಕತೆಯಿಂದ ಕಾರ್ಯನಿರ್ವಹಿಸಿ, ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಎದುರಿಸಬೇಕು ಎಂದು ನಮಗೆ ಸೂಚಿಸಲಾಗಿದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ರಾಜ್ಯ ಪೊಲೀಸ್ ಹಾಗೂ ಕೇಂದ್ರ ಪಡೆಗಳು ಸಮನ್ವಯದ ಕಾರ್ಯಾಚರಣೆ ನಡೆಸುತ್ತಿದ್ದು, ಜಿಲ್ಲೆಗಳಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಎಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಮೇ 4ರಂದು ಮತ ಎಣಿಕೆ ನಡೆದಿದ್ದು, 294 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 207 ಸ್ಥಾನಗಳನ್ನು ಗೆದ್ದು ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಟಿಎಂಸಿಯ 15 ವರ್ಷಗಳ ಆಡಳಿತ ಅಂತ್ಯಗೊಂಡಿದೆ.

