ನವದೆಹಲಿ: ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಮತ್ತು ಪುದುಚೆರಿಯಲ್ಲಿ ಹಿಂದೂ ದೇವಸ್ಥಾನಗಳ ಆಡಳಿತವನ್ನು ನಿಯಂತ್ರಿಸುವ ಕಾನೂನುಗಳ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಪರಿಶೀಲನೆ ನಡೆಸಲಿದೆ. 2012ರಲ್ಲಿ ಈ ಆರ್ಜಿಗಳನ್ನು ಸಲ್ಲಿಸಲಾಗಿತ್ತು.
ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನಾ ಮತ್ತು ಸಶೀಶ್ ಚಂದ್ರ ಶರ್ಮಾ ಅವರ ಪೀಠವು ಸೋಮವಾರ ಮರು ಪರಿಶೀಲನಾ ಅರ್ಜಿಗಳನ್ನು ವಿಚಾರಣೆಗೆ ಒಪ್ಪಿದೆ. ಆ ಮೂಲಕ ಮೂಲಕ 2025ರ ಏಪ್ರಿಲ್‌ನಲ್ಲಿ ನೀಡಿದ್ದ ಆದೇಶವನ್ನು ಹಿಂಪಡೆದಿದೆ.
ಹಿಂದಿನ ಆದೇಶದಲ್ಲಿ, ಅರ್ಜಿದಾರರಿಗೆ ರಿಟ್ ಅರ್ಜಿಗಳನ್ನು ಸಲ್ಲಿಸುವ ಬದಲು ಸಂಬಂಧಪಟ್ಟ ಹೈಕೋರ್ಟ್‌ಗಳನ್ನು ಸಂಪರ್ಕಿಸಿ ಎಂದು ಹೇಳಲಾಗಿತ್ತು.
ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ದತ್ತಿ ಕಾಯ್ದೆ 1959, ಆಂಧ್ರಪ್ರದೇಶ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಕಾಯ್ದೆ 1987, ಪುದುಚೆರಿ ಹಿಂದೂ ಧಾರ್ಮಿಕ ಸಂಸ್ಥೆಗಳ ಕಾಯ್ದೆ 1972 ಮತ್ತು 1987ರ ತೆಲಂಗಾಣ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ಕಾಯ್ದೆಯಲ್ಲಿನ ನಿಬಂಧನೆಗಳನ್ನು 2012ರಲ್ಲಿ ಸಲ್ಲಿಸಲಾಗಿದ್ದ ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು.
ಈ ಮೂರೂ ಕಾಯ್ದೆಯಲ್ಲಿನ ನಿಬಂಧನೆಗಳು ಸಂವಿಧಾನದ 14 (ಸಮಾನತೆಯ ಹಕ್ಕು), 19 (ವೃತ್ತಿ ಸ್ವಾತಂತ್ರ್ಯ), 25, 26 ಮತ್ತು 31ಎ ವಿಧಿಗಳನ್ನು ಉಲ್ಲಂಘಿಸುತ್ತವೆ ಎಂದು ಅರ್ಜಿದಾರರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

