ನವದೆಹಲಿ: ಕೇರಳ ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಶಾಸಕರ ಅಭಿಪ್ರಾಯ ಸಂಗ್ರಹಿಸಿದ್ದ ಕಾಂಗ್ರೆಸ್ ವೀಕ್ಷಕರು ತಮ್ಮ ವರದಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಶುಕ್ರವಾರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿಯ ಆಯ್ಕೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವಂತೆ ಪಕ್ಷದ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.
ಎಐಸಿಸಿ ವೀಕ್ಷಕರಾದ ಮುಕುಲ್ ವಾಸ್ನಿಕ್ ಮತ್ತು ಅಜಯ್ ಮಾಕನ್ ಅವರು ಕಾಂಗ್ರೆಸ್ ಶಾಸಕರೊಂದಿಗೆ ಗುರುವಾರ ಸಭೆ ನಡೆಸಿ, ಅಭಿಪ್ರಾಯ ಪಡೆದುಕೊಂಡಿದ್ದರು. ನೂತನ ಶಾಸಕರು ವ್ಯಕ್ತಪಡಿಸಿರುವ ಅಭಿಪ್ರಾಯದ ಕುರಿತು ಖರ್ಗೆ ಅವರೊಂದಿಗೆ ಚರ್ಚಿಸಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವುದಕ್ಕೆ ಪಕ್ಷದ ಬಹುಪಾಲು ಶಾಸಕರು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಹಿಂದೆ ಕೇರಳಂ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ವಿ.ಡಿ. ಸತೀಶನ್ ಅವರನ್ನು ಜನರು ಬೆಂಬಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೆ.ಸಿ. ವೇಣುಗೋಪಾಲ್, ಸತೀಶನ್ ಹಾಗೂ ರಮೇಶ್ ಚೆನ್ನಿತ್ತಲ ಅವರು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು. ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಖರ್ಗೆ ಅವರು ಈ ಮೂವರು ಆಕಾಂಕ್ಷಿಗಳನ್ನು ಮಾತುಕತೆಗಾಗಿ ಕರೆದಿದ್ದಾರೆ.
ವೇಣುಗೋಪಾಲ್ ಅವರು ಮುಖ್ಯಮಂತ್ರಿ ಹುದ್ದೆ ವಹಿಸಿಕೊಳ್ಳಲು ಉತ್ಸುಕರಾಗಿದ್ದಾರೆ. ಇದಕ್ಕಾಗಿ ಪಕ್ಷದ ಹೈಕಮಾಂಡ್ ಮೇಲೆ ತಮ್ಮ ಪ್ರಭಾವ ಬಳಸುತ್ತಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಹತ್ತಿರವಾಗಿರುವುದು ಸಹ ಅವರಿಗೆ ಅನುಕೂಲವಾಗಬಹುದು ಎಂದು ಮೂಲಗಳು ತಿಳಿಸಿವೆ.
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ ಮೈತ್ರಿಕೂಟವು ಒಟ್ಟು 102 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

