ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳವು (ಸಿಬಿಐ) ಬುಧವಾರ ದೇಶದ ವಿವಿಧೆಡೆ ದಾಳಿ ನಡೆಸಿದ್ದು, ಐವರನ್ನು ಬಂಧಿಸಿದೆ.
ಜೈಪುರದಲ್ಲಿ ಮೂವರು, ಗುರುಗ್ರಾಮ ಮತ್ತು ನಾಸಿಕ್‌ನಲ್ಲಿ ತಲಾ ಒಬ್ಬರನ್ನು ಬಂಧಿಸಲಾಗಿದೆ. ಜತೆಗೆ, ಹಲವು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಶಿಕ್ಷಣ ಸಚಿವಾಲಯದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಸಿಬಿಐ, ದೇಶದಾದ್ಯಂತ ಹಲವು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.
ಪ್ರಕರಣ ಸಂಬಂಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್), ಭ್ರಷ್ಟಾಚಾರ ತಡೆ ಕಾಯ್ದೆ ಮತ್ತು ಸಾರ್ವಜನಿಕ ಪರೀಕ್ಷೆಗಳ ಕಾಯ್ದೆ-2024ರ ಅಡಿಯಲ್ಲಿ ಕ್ರಿಮಿನಲ್ ಪಿತೂರಿ, ವಂಚನೆ, ವಿಶ್ವಾಸದ್ರೋಹ ಸೇರಿದಂತೆ ವಿವಿಧ ಕಲಂಗಳಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದಾದ ನೀಟ್-ಯುಜಿ ಪರೀಕ್ಷೆಗೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಲು ಸಿಬಿಐ ತಂಡವು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಪ್ರಧಾನ ಕಚೇರಿಗೆ ಭೇಟಿ ನೀಡಿದ್ದು, ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳನ್ನು ವಿಚಾರಣೆ ನಡೆಸಿದೆ ಎಂದು ವರದಿಯಾಗಿದೆ.
ರಾಜಸ್ಥಾನದ ಪೊಲೀಸರ ಮನವಿ ಮೇರೆಗೆ ಮಹಾರಾಷ್ಟ್ರದ ಪೊಲೀಸರು ನಾಸಿಕ್‌ನಲ್ಲಿ 30 ವರ್ಷದ ಶುಭಂ ಖೈರ್‌ನಾರ್ ಎಂಬಾತನನ್ನು ಬಂಧಿಸಿದ್ದರು. ಸ್ಥಳೀಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಶುಭಂನನ್ನು ಸಿಬಿಐ ಕಸ್ಟಡಿಗೆ ಒಪ್ಪಿಸಿದೆ.
ರಾಜಸ್ಥಾನ ಪೊಲೀಸರು ವಶಕ್ಕೆ ಪಡೆದಿದ್ದ ಹಲವು ಶಂಕಿತರನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ. ಜತೆಗೆ, ಪ್ರಶ್ನೆ ಪತ್ರಿಕೆಗಳನ್ನು ಹಂಚಿಕೊಳ್ಳಲಾಗಿದೆ ಎನ್ನಲಾದ ವ್ಯಾಟ್ಸ್‌ಆಯಪ್ ಗ್ರೂಪ್‌ಗಳನ್ನೂ ಸಿಬಿಐ ಪರಿಶೀಲಿಸುತ್ತಿದೆ.
ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಮೇ 3ರಂದು ನಡೆದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ (ನೀಟ್-ಯುಜಿ) ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಕಾರಣದಿಂದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಆ ಪರೀಕ್ಷೆಯನ್ನು ಮಂಗಳವಾರ ರದ್ದುಗೊಳಿಸಿದೆ.
ಮೇ 3ರಂದು ದೇಶದ 551 ನಗರಗಳಲ್ಲಿ ಮತ್ತು ವಿದೇಶದ 14 ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಸಲಾಗಿತ್ತು. ಸುಮಾರು 23 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

