ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಆಯ್ಕೆ ಹಾಗೂ ಕ್ಷೇತ್ರಗಳ ಹಂಚಿಕೆ ಪ್ರಕ್ರಿಯೆಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಕರೂರ್ ಕಾಂಗ್ರೆಸ್ ಸಂಸದೆ ಎಸ್. ಜೋತಿಮಣಿ ಆರೋಪಿಸಿದ್ದಾರೆ.
ಪಕ್ಷದೊಳಗೆ ವ್ಯಾಪಕ ಅಕ್ರಮ ನಡೆದಿದ್ದು, ಮೊದಲೇ ಆಯ್ಕೆಯಾಗಿದ್ದ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ವಿಧಾನಸಭಾ ಕ್ಷೇತ್ರಗಳನ್ನು ಮಂಜೂರು ಮಾಡಲಾಗಿದೆ ಎಂದು ಅವರು ಶುಕ್ರವಾರ ದೂರಿದ್ದಾರೆ.
ಸಮೀಕ್ಷೆಯ ಹೆಸರಿನಲ್ಲಿ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದೂ ಆರೋಪಿಸಿದ್ದಾರೆ.
ಹಲವು ದಶಕಗಳಿಂದ ಪಕ್ಷಕ್ಕಾಗಿ ದುಡಿದಿರುವ ಹಾಗೂ ಚುನಾವಣೆಯಲ್ಲಿ ಗೆಲ್ಲುವ ಸಾಮರ್ಥ್ಯ ಹೊಂದಿದ್ದ ಹಿರಿಯ ಕಾರ್ಯಕರ್ತರು ಮತ್ತು ಮುಖಂಡರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅವರ ಬದಲಿಗೆ ಹೊಸಬರು ಅಥವಾ ಚುನಾವಣಾ ಗೆಲುವಿನ ಸಾಧ್ಯತೆ ಕಡಿಮೆ ಇದ್ದ ಅಭ್ಯರ್ಥಿಗಳಿಗೆ ಉದ್ದೇಶಪೂರ್ವಕವಾಗಿ ಕ್ಷೇತ್ರಗಳನ್ನು ಹೊಂದಾಣಿಕೆ ಮಾಡಿ ನೀಡಲಾಗಿದೆ ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಪಡೆದ ಕೆಲ ಅಭ್ಯರ್ಥಿಗಳು ಕೆಲವೇ ದಿನಗಳಲ್ಲಿ ಪಕ್ಷ ತೊರೆದಿದ್ದಾರೆ. ಇನ್ನು ಕೆಲವರು ಚುನಾವಣೆ ಮುಕ್ತಾಯಗೊಂಡ ಕೆಲವೇ ದಿನಗಳಲ್ಲಿ ನಿಷ್ಕ್ರಿಯರಾಗಿದ್ದಾರೆ ಎಂದೂ ಅವರು ಆಪಾದಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜೋತಿಮಣಿ, 'ಈ ಅಭ್ಯರ್ಥಿಗಳಿಗೆ ಅವಕಾಶ ನೀಡಿದವರು ಯಾರು? ಅವರನ್ನು ಯಾವ ಮಾನದಂಡಗಳ ಆಧಾರದಲ್ಲಿ ಆಯ್ಕೆ ಮಾಡಲಾಯಿತು? ಈ ನಿರ್ಧಾರಗಳಿಗೆ ಹೊಣೆಗಾರರಾದವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ?' ಎಂದು ಪ್ರಶ್ನಿಸಿದ್ದಾರೆ.
ಕ್ಷೇತ್ರಗಳ ಮಂಜೂರಾತಿ ಹಾಗೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕುರಿತು ತನಿಖೆ ನಡೆಸದೆ, ಚುನಾವಣೆಯ ವೇಳೆ ನಡೆದ ಪಕ್ಷ ವಿರೋಧಿ ಚಟುವಟಿಕೆಗಳ ಕುರಿತು ತನಿಖೆ ನಡೆಸಲು ಮಾತ್ರ ಸಮಿತಿಯನ್ನು ರಚಿಸಲಾಗಿದೆ. ಇದು ನಿಜವಾದ ತಪ್ಪಿತಸ್ಥರನ್ನು ರಕ್ಷಿಸುವ ವ್ಯವಸ್ಥೆಯಾಗಿದೆ ಎಂದು ಅವರು ಟೀಕಿಸಿದ್ದಾರೆ.
ತಮಿಳುನಾಡು ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕ್ಷೇತ್ರಗಳ ಮಂಜೂರಾತಿ ಮತ್ತು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯ ಜವಾಬ್ದಾರಿಯನ್ನು ತಮಿಳುನಾಡು ಚುನಾವಣಾ ಉಸ್ತುವಾರಿ ಗಿರೀಶ್ ಚೋದಂಕರ್ ನೇತೃತ್ವದ ಸಮಿತಿ ವಹಿಸಿತ್ತು.
ಕಾಂಗ್ರೆಸ್ ಪಕ್ಷದ ನಿಯಮಾವಳಿಗಳ ಪ್ರಕಾರ, ಈ ಸಮಿತಿಯ ವಿರುದ್ಧದ ಆರೋಪಗಳ ತನಿಖೆಯನ್ನು ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ (ಎಐಸಿಸಿ) ಮಾತ್ರ ನಡೆಸಲು ಸಾಧ್ಯ ಎಂದು ತಿಳಿದುಬಂದಿದೆ.

