ಚೆನ್ನೈ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಕಾರಣದಿಂದಾಗಿ ಅನಿಶ್ಚಿತತೆ ಉಂಟಾಗಿದ್ದು, ವೈದ್ಯಕೀಯ ಆಕಾಂಕ್ಷಿಗಳು ಎಂಜಿನಿಯರಿಂಗ್ ಕೋರ್ಸ್‌ಗಳತ್ತ ಮುಖ ಮಾಡುತ್ತಿದ್ದಾರೆ.
ಅಣ್ಣಾ ವಿಶ್ವವಿದ್ಯಾಲಯವು ಬಿ.ಇ. ಮತ್ತು ಬಿ.ಟೆಕ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ತಮಿಳುನಾಡು ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆ(ಟಿಎನ್‌ಇಎ) ನಡೆಸುತ್ತದೆ.
12ನೇ ತರಗತಿಯ ಅಂಕಗಳನ್ನು ಆಧರಿಸಿ ನಡೆಸುವ ಟಿಎನ್‌ಇಎಗೆ ಮೇ 3ರಿಂದ ಆನ್‌ಲೈನ್ ನೋಂದಣಿ ಪ್ರಾರಂಭವಾಗಿದೆ ಎಂದು ತಾಂತ್ರಿಕ ಶಿಕ್ಷಣ ನಿರ್ದೇಶನಾಲಯ ತಿಳಿಸಿದೆ.
ತಮಿಳುನಾಡಿನಲ್ಲಿ ಎಂಜಿನಿಯರಿಂಗ್ ಪ್ರವೇಶ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. 26 ದಿನಗಳ ಅವಧಿಯಲ್ಲಿ, 2.5 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಅದು ಮೂರು ಲಕ್ಷವನ್ನು ತಲುಪುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ವೈದ್ಯಕೀಯ ಕೌನ್ಸೆಲಿಂಗ್ ವಿಳಂಬವಾಗಿದ್ದು, ಇದರಿಂದಾಗಿ ಅನೇಕ ವೈದ್ಯಕೀಯ ಆಕಾಂಕ್ಷಿಗಳು, ಎಂಜಿನಿಯರಿಂಗ್ ಪ್ರವೇಶ ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.
ವೈದ್ಯಕೀಯ ಪ್ರವೇಶ ವಿಳಂಬವು ರಾಜ್ಯದಲ್ಲಿ ಎಂಜಿನಿಯರಿಂಗ್ ಪ್ರವೇಶ ವೇಳಾಪಟ್ಟಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದಾಖಲಾತಿಗೆ ಜೂನ್ 2ರಂದು ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.
ತಮಿಳುನಾಡಿನಲ್ಲಿ ಅಣ್ಣಾ ವಿಶ್ವವಿದ್ಯಾಲಯದೊಂದಿಗೆ ಸಂಯೋಜಿತವಾಗಿರುವ 400ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸುಮಾರು 2.5 ಲಕ್ಷ ಎಂಜಿನಿಯರಿಂಗ್ ಸೀಟುಗಳು ಲಭ್ಯವಿದೆ. ಜೂನ್ 29ರಂದು ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.

