ಕೋಲ್ಕತ್ತ: ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಇಂದು (ಮೇ 9, ಶನಿವಾರ) ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬ್ರಿಗೇಡ್ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಆರ್.ಎನ್. ರವಿ ಅವರು ಸುವೇಂದು ಅವರಿಗೆ ಪ್ರಮಾಣ ಬೋಧಿಸಿದ್ದಾರೆ.
ಇದರೊಂದಿಗೆ, ರಾಜ್ಯದಲ್ಲಿ ಮುಖ್ಯಮಂತ್ರಿ ಗಾದಿಗೇರಿದ ಬಿಜೆಪಿಯ ಮೊದಲಿಗೆ ಎಂಬ ಖ್ಯಾತಿ ಸುವೇಂದು ಅವರದ್ದಾಗಿದೆ.
ಬಿಜೆಪಿಯ ಹಿರಿಯ ನಾಯಕ ದಿಲೀಪ್ ಘೋಷ್, ಶಾಸಕರಾದ ಅಗ್ನಿಮಿತ್ರಾ ಪೌಲ್, ಅಶೋಕ್ ಕಿರ್ತಾನಿಯಾ, ನಿತೀಶ್ ಪ್ರಾಮಾಣಿಕ್, ಕ್ಷುದಿರಾಮ್ ತುಡು ಅವರೂ ಇದೇ ವೇಳೆ ಸಚಿವರಾಗಿ ಪ್ರಮಾಣ ಸ್ವೀಕರಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.
294 ಸದಸ್ಯ ಬಲದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶ ಮೇ 4ರಂದು ಪ್ರಕಟವಾಗಿತ್ತು. ಬಿಜೆಪಿ 207 ಸ್ಥಾನಗಳನ್ನು ಗೆದ್ದು ಭಾರಿ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.
ಇದರೊಂದಿಗೆ, ಕೇಸರಿ ಪಕ್ಷವು ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಅಧಿಕಾರಕ್ಕೇರಿದೆ. ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷ 15 ವರ್ಷಗಳ ಬಳಿಕ ಅಧಿಕಾರ ಕಳೆದುಕೊಂಡಂತಾಗಿದೆ.
ಟಿಎಂಸಿ 80 ಕಡೆ ಜಯ ಸಾಧಿಸಿದೆ. ಕಾಂಗ್ರೆಸ್ ಮತ್ತು ಆಮ್ ಜನತಾ ಉನ್ನಾಯನ್ ಪಕ್ಷ ತಲಾ ಎರಡು ಕ್ಷೇತ್ರಗಳಲ್ಲಿ ಗೆದ್ದಿವೆ. ಸಿಪಿಐ(ಎಂ) ಮತ್ತು ಆಲ್ ಇಂಡಿಯಾ ಸೆಕ್ಯುಲರ್ ಫ್ರಂಟ್ ಒಂದೊಂದು ಕಡೆ ಜಯ ಸಾಧಿಸಿವೆ.

