ನವದೆಹಲಿ: 'ನೀಟ್-ಯುಜಿ' ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡುವವರೆಗೂ ಕಾಂಗ್ರೆಸ್ ವಿಶ್ರಮಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತಿಳಿಸಿದ್ದಾರೆ.
ಜತೆಗೆ ಪ್ರಶ್ನೆಪತ್ರಿಕೆ ಸೋರಿಕೆಯಂಥ ಘಟನೆಗಳು ಮರುಕಳಿಸದಂತೆ ತಡೆಗಟ್ಟಲು ಕಟ್ಟುನಿಟ್ಟಾದ ವ್ಯವಸ್ಥೆಯನ್ನು ರೂಪಿಸಬೇಕೆಂದೂ ಅವರು ಆಗ್ರಹಿಸಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆಯನ್ನು ಖಂಡಿಸಿ, ಕಾಂಗ್ರೆಸ್ನ ವಿದ್ಯಾರ್ಥಿ ಘಟಕ 'ಎನ್ಎಸ್ಯುಐ' ನೇತೃತ್ವದಲ್ಲಿ ಹೈದರಾಬಾದ್ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ವಿಡಿಯೊವನ್ನು ರಾಹುಲ್ ಗಾಂಧಿ 'ಎಕ್ಸ್'ನಲ್ಲಿ ಹಂಚಿಕೊಂಡಿದ್ದಾರೆ.
'22 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಅಪಾಯದಲ್ಲಿ ಸಿಲುಕಿದೆ, ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಇಷ್ಟಾದರೂ ಸರ್ಕಾರ ಮಾತ್ರ ತುಟಿ ಬಿಚ್ಚುತ್ತಿಲ್ಲ. ವಿದ್ಯಾರ್ಥಿಗಳ ಸಮಸ್ಯೆಗೆ ಪ್ರತಿಕ್ರಿಯಿಸುವ ಬದಲು ಸರ್ಕಾರವು ಆರೋಪಗಳಿಂದ ನುಣುಚಿಕೊಳ್ಳುವಲ್ಲಿ ನಿರತವಾಗಿದೆ' ಎಂದೂ ರಾಹುಲ್ ಆರೋಪಿಸಿದ್ದಾರೆ.

