ಕಾಸರಗೋಡು: ನರೇಂದ್ರ ಮೋದಿ ಸರ್ಕಾರದ 12ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ, ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ 'ನವ ಭಾರತ ವೇದಿಕೆ' ಎಂಬ ಹೆಸರಿನಲ್ಲಿ 'ವಿಕಸಿತ ಭಾರತ ಸಮಾವೇಶ'ವನ್ನು ಆಯೋಜಿಸಲಾಗಿತ್ತು.
ಬಿಜೆಪಿ ಜಿಲ್ಲಾ ಸಮಿತಿ ಕಚೇರಿ ಡಾ. ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷರಾದ ಅಶ್ವಿನಿ ಎಂ.ಎಲ್. ಅವರು ಉದ್ಘಾಟಿಸಿ ಮಾತನಾಡಿ, ವಿಶ್ವದಲ್ಲೇ ಹತ್ತನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿದ್ದ ಭಾರತವನ್ನು ಕೇವಲ 12 ವರ್ಷಗಳಲ್ಲಿ ನಾಲ್ಕನೇ ಸ್ಥಾನಕ್ಕೆ ತರುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ದೂರದರ್ಶಿತ್ವ ಮತ್ತು ಅವಿರತ ಶ್ರಮ ಅಡಕವಾಗಿದೆ. ಭ್ರಷ್ಟಾಚಾರ ಮತ್ತು ಆಡಳಿತಾತ್ಮಕ ಅಸ್ಥಿರತೆಯಿಂದ ನಲುಗಿದ್ದ ಭಾರತಕ್ಕೆ ಆರ್ಥಿಕ ಚೇತರಿಕೆ ಮತ್ತು ಸರಿಯಾದ ದಿಕ್ಸೂಚಿ ನೀಡಿರುವ ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿ ದೇಶದ ಖ್ಯಾತಿ ಜಾಗತಿಕ ಮಟ್ಟದಲ್ಲಿ ಪ್ರಜ್ವಲಿಸಲು ಸಾಧ್ಯವಾಗಿದೆ. ಜನಕಲ್ಯಾಣ ಯೋಜನೆಗಳ ಜೊತೆಗೆ ಬೃಹತ್ ಮೂಲಸೌಕರ್ಯ ಯೋಜನೆಗಳನ್ನೂ ಮೋದಿ ಜಾರಿಗೆ ತಂದಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನುಲಾಲ್ ಮೇಲತ್ ಸಮಾಂಭದ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್. ಸುನಿಲ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಂ. ಬಲರಾಜ್, ಕೃಷಿಕ ಮೋರ್ಚಾ ರಾಜ್ಯ ಉಪಾಧ್ಯಕ್ಷ ಕುಞÂಕಣ್ಣನ್ ಬಳಾಲ್, ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡ, ಜಿಲ್ಲಾ ಕೋಶಾಧಿಕಾರಿ ವೀಣಾ ಅರುಣ್ ಶೆಟ್ಟಿ, ಜಿಲ್ಲಾ ಸೆಲ್ ಸಂಯೋಜಕ ಸುಕುಮಾರ್ ಕುದ್ರೆಪ್ಪಾಡಿ, ಬಿಜೆಪಿ-ವಿವಿಧ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಸಂಸ್ಮರಣೆ ಹಾಗೂ ಪುಷ್ಪಾರ್ಚನೆ ಕಾರ್ಯಕ್ರಮ ಜರುಗಿತು.



