ವಿಶಾಖಪಟ್ಟಣ: ಇಲ್ಲಿನ ವಿಶಾಖ ಉಕ್ಕು ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಹಲವು ಕಾರ್ಮಿಕರು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಉಕ್ಕು ಕರಗಿಸುವ ಘಟಕದಲ್ಲಿನ ಉಷ್ಣ ನಿರೋಧಕ ದ್ರವರೂಪದ ಕೊಳಗದಿಂದ ಲೋಹ ಸೋರಿಕೆಯಾದ ಹಿನ್ನೆಲೆಯಲ್ಲಿ ಸ್ಫೋಟ ಸಂಭವಿಸಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಜೊತೆಗೆ ಈ ಬಗ್ಗೆ ಸಚಿವ ಕುಮಾರಸ್ವಾಮಿ ಅವರಿಗೆ ಅಧಿಕಾರಿಗಳು ಮಾಹಿತಿ ನೀಡಿದರು. ದುರಂತ ನಡೆದ ಸ್ಥಳವನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ ಕುಮಾರಸ್ವಾಮಿ ಅವರು ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಅಲ್ಲದೆ, ದುರಂತದಲ್ಲಿ ಸಾವನ್ನಪ್ಪಿದ ಕಾರ್ಮಿಕರ ಬಗ್ಗೆ ಹಾಗೂ ದುರಂತಕ್ಕೆ ಕಾರಣವಾದ ಅಂಶಗಳ ಬಗ್ಗೆ ತಕ್ಷಣವೇ ವರದಿ ನೀಡುವಂತೆ ಕಾರ್ಖಾನೆಯ ಆಡಳಿತ ಮಂಡಳಿಗೆ ಸಚಿವ ಕುಮಾರಸ್ವಾಮಿ ಅವರು ಸೂಚನೆ ನೀಡಿದರು.

ತಲಾ ₹25 ಲಕ್ಷ ಪರಿಹಾರ ಘೋಷಿಸಿದ ಸಚಿವ ಹೆಚ್.ಡಿ. ಕುಮಾರಸ್ವಾಮಿ
'ದುರಂತದಲ್ಲಿ ಮೃತಪಟ್ಟ ಕುಟುಂಬ ಸದಸ್ಯರಲ್ಲಿ ಒಬ್ಬರಿಗೆ ಉದ್ಯೋಗ ಮತ್ತು ಅವರಿಗೆ ದೊರೆಯುವ ಪ್ರಯೋಜನಗಳ ಜತೆಗೆ ₹25 ಲಕ್ಷ ಪರಿಹಾರವನ್ನು ನೀಡಲಾಗುವುದು. ತೀವ್ರವಾಗಿ ಗಾಯಗೊಂಡ ಕಾರ್ಮಿಕರಿಗೆ ₹10 ಲಕ್ಷ ಪರಿಹಾರ ನೀಡಲಾಗುವುದು. ಅಲ್ಲದೆ ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಕಾರ್ಖಾನೆಯೇ ಭರಿಸಲಿದೆ' ಎಂದು ಸಚಿವರು ಘೋಷಿಸಿದರು.
ಜತೆಗೆ, 'ಮೃತರ ಕುಟುಂಬ ಸದಸ್ಯರು, ಮೃತರ ನಿವೃತ್ತಿಯ ದಿನಾಂಕದವರೆಗೆ ಸ್ಟೀಲ್ ಪ್ಲಾಂಟ್ ಟೌನ್ಶಿಪ್ನಲ್ಲಿ ತಮ್ಮ ವಸತಿ ಗೃಹಗಳಲ್ಲಿ ವಾಸಿಸಲು ಅನುಮತಿಸಲಾಗಿದೆ. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ. ಹಾಗೆಯೇ, ಮೃತ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸದ ವೆಚ್ಚವನ್ನು ಕಾರ್ಖಾನೆ ಭರಿಸಲಿದೆ. ಮೃತ ಕಾಯಂ ಕಾರ್ಮಿಕರಿಗೆ ಯಾವ ರೀತಿಯ ಪರಿಹಾರ ದೊರೆಯುತ್ತದೆಯೋ ಗುತ್ತಿಗೆ ಕಾರ್ಮಿಕರಿಗೂ ಅಷ್ಟೇ ಪ್ರಮಾಣದ ಪರಿಹಾರ ಮೊತ್ತ ನೀಡಲಾಗುವುದು' ಎಂದು ಸಚಿವರು ಹೇಳಿದರು.
ಇನ್ನು, ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಂತರ ಮೃತ ಕಾರ್ಮಿಕರ ಕುಟುಂಬಗಳ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.
'ಸುರಕ್ಷಣೆ ಬಗ್ಗೆ ಸಂಸ್ಥೆಯು ಕಠಿಣ ವ್ಯವಸ್ಥೆಯನ್ನು ಹೊಂದಿದೆ. ಆದರೂ ಈ ದುರ್ಘಟನೆ ಸಂಭವಿಸಿದೆ. ಭವಿಷ್ಯದಲ್ಲಿ ಇಂತಹ ದುರಂತಗಳು ಮರುಕಳಿಸಿದಂತೆ ಕಠಿಣ ಕ್ರಮ ವಹಿಸಲಾಗುವುದು. ಎಲ್ಲಾ ರೀತಿಯಲ್ಲೂ ದುರಂತದ ಬಗ್ಗೆ ತನಿಖೆ ನಡೆಸಿ ಕ್ರಮ ವಹಿಸಲಾಗುವುದು. ದುರಂತದ ಬಗ್ಗೆ ಮುಕ್ತವಾಗಿ ತನಿಖೆ ನಡೆಸಲು ಆದೇಶ ನೀಡಲಾಗಿದೆ' ಎಂದು ಸಚಿವ ಕುಮಾರಸ್ವಾಮಿ ಹೇಳಿದರು.

