ಲಖನೌ: ಉತ್ತರಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ತಿಳಿಸಿದ್ದಾರೆ.
ಮೂರು ಅಂತಸ್ತಿನ ವಾಣಿಜ್ಯ ಕಟ್ಟಡ ಇದಾಗಿದ್ದು, ಬೆಂಕಿ ಆವರಿಸಿಕೊಳ್ಳುತ್ತಿದ್ದಂತೆ ವಿದ್ಯಾರ್ಥಿಗಳು ಮೊದಲ ಮಹಡಿಯಿಂದ ಕೆಳಗೆ ಜಿಗಿಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಅಲಿಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಉಷಾ ಮೆಹ್ತಾ ಮಾರ್ಗದಲ್ಲಿರುವ ಕಟ್ಟಡದಲ್ಲಿ ಮಧ್ಯಾಹ್ನ 3 ಗಂಟೆಗೆ ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಸಿಕ್ಕಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಮಾಹಿತಿ ಸಿಕ್ಕ ತಕ್ಷಣ ಪೊಲೀಸರು ಸೇರಿದಂತೆ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಹಲವು ವಿದ್ಯಾರ್ಥಿಗಳು ಕಟ್ಟಡದಿಂದ ಹೊರಬರುವಲ್ಲಿ ಯಶಸ್ವಿಯಾದರೆ, ಅನೇಕರು ಒಳಗೆ ಸಿಲುಕಿಕೊಂಡಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಕಟ್ಟಡದಲ್ಲಿದ್ದ ಕೋಚಿಂಗ್ ಸೆಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಆರಂಭಿಕ ವರದಿಗಳು ಹೇಳಿದ್ದವಾದರೂ, ಅದು ಕೋಚಿಂಗ್ ಸೆಂಟರ್ ಅಲ್ಲ, ಬದಲಿಗೆ 'ಅನಿಮೇಷನ್ ಸೆಂಟರ್' ಎಂದು ಪಾಠಕ್ ನಂತರ ಸ್ಪಷ್ಟಪಡಿಸಿದ್ದಾರೆ.
ದಟ್ಟವಾದ ಹೊಗೆಯಿಂದಾಗಿ ರಕ್ಷಣಾ ಕಾರ್ಯಾಚರಣೆ ಸವಾಲಾಗಿ ಪರಿಣಮಿಸಿದ್ದರಿಂದ, ಅಗ್ನಿಶಾಮಕ ಸಿಬ್ಬಂದಿ ಪಕ್ಕದ ಕಟ್ಟಡದ ಗೋಡೆಯನ್ನು ಒಡೆದು ಅದರ ಮೂಲಕ ಈ ಕಟ್ಟಡದ ಒಳಗೆ ಪ್ರವೇಶಿಸಿದ್ದರು ಎಂದು ಅವರು ಹೇಳಿದ್ದಾರೆ.
ಮೂರು ಅಂತಸ್ತಿನ ಈ ಕಟ್ಟಡದ ನೆಲಮಹಡಿಯಲ್ಲಿ ಸಾಕುಪ್ರಾಣಿಗಳ ಅಂಗಡಿ ಮತ್ತು ಮೇಲಿನ ಮಹಡಿಯಲ್ಲಿ ಅನಿಮೇಷನ್ ಸೆಂಟರ್ ಇತ್ತು ಎಂದಿದ್ದಾರೆ.
ಮೃತದೇಹಗಳನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

