ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 56ನೇ ಹುಟ್ಟುಹಬ್ಬದ ಅಂಗವಾಗಿ ದೆಹಲಿಯ ಟಾಲ್ಕರೋಟಾ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಶುಕ್ರವಾರ ಭಾಗವಹಿಸಿದ್ದರು ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.
ಭಾರತೀಯ ಯುವ ಕಾಂಗ್ರೆಸ್ ಹಾಗೂ ದೆಹಲಿ ಪ್ರಾದೇಶಿಕ ಕಾಂಗ್ರೆಸ್ ಜಂಟಿಯಾಗಿ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 35,000 ಜನರು ನೋಂದಾಯಿಸಿಕೊಂಡಿದ್ದಾರೆ ಎಂದು ಪಕ್ಷವು ತಿಳಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ 'ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿರುವುದು ದೇಶದಲ್ಲಿನ ನಿರುದ್ಯೋಗ ಪ್ರಮಾಣವನ್ನು ಪ್ರತಿಬಿಂಬಿಸುತ್ತದೆ' ಎಂದು ಹೇಳಿದರು.
'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು 'ಈ ಉದ್ಯೋಗ ಮೇಳವು ಮೌನ ಪ್ರತಿಭಟನೆಯಾಗಿದೆ. ಕೇಂದ್ರ ಬಿಜೆಪಿ ಸರ್ಕಾರವು ಯುವಜನರಿಗೆ ಉದ್ಯೋಗಾವಕಾಶವನ್ನು ಸೃಷ್ಟಿಸುವಲ್ಲಿ ವಿಫಲವಾಗಿದೆ' ಎಂದು ಹೇಳಿದ್ದಾರೆ.
'ನೂರಾರು ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದವು. ಸ್ಥಳದಲ್ಲೇ ಉದ್ಯೋಗಾಕಾಂಕ್ಷಿಗಳ ಸಂದರ್ಶನವನ್ನೂ ನಡೆಸಿದವು. ಆಯ್ದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಲಾಗುವುದು' ಎಂದು ಉದಯ್ ಹೇಳಿದ್ದಾರೆ.

