ವಿಶ್ವಸಂಸ್ಥೆ: ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದವನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಸ್ವಾಗತಿಸಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಈ ಒಪ್ಪಂದವು 'ನಿರ್ಣಾಯಕ ಹೆಜ್ಜೆ' ಎಂದು ಅವರು ಬಣ್ಣಿಸಿದ್ದಾರೆ.
ಹಾರ್ಮುಝ್ ಜಲಸಂಧಿಯನ್ನು ಮತ್ತೆ ತೆರೆಯುವ ಕ್ರಮದೊಂದಿಗೆ ಜಾರಿಗೆ ಬಂದಿರುವ ಈ ಒಪ್ಪಂದವು ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಸ್ಥಾಪನೆಗೆ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.
'ಈ ಹೊಸ ಬೆಳವಣಿಗೆಯನ್ನು ಆಧಾರವಾಗಿಟ್ಟುಕೊಂಡು ಅಮೆರಿಕ ಮತ್ತು ಇರಾನ್ ಸಂಘರ್ಷದ ಅಂತಿಮ ಪರಿಹಾರದತ್ತ ತಮ್ಮ ಪ್ರಯತ್ನಗಳನ್ನು ಇನ್ನಷ್ಟು ತೀವ್ರಗೊಳಿಸುವರೆಂದು ಪ್ರಧಾನ ಕಾರ್ಯದರ್ಶಿಯವರು ಆಶಿಸಿದ್ದಾರೆ' ಎಂದು ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

